ಬೆಳಗಾವಿ(ವಿಶ್ವಕನ್ನಡಿಗ ನ್ಯೂಸ್): ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನಲ್ಲಿ ಇತ್ತೀಚೆಗೆ ಉಂಟಾದ ಭೀಕರ ಪ್ರವಾಹದಿಂದ ತತ್ತರಿಸಿ ಜನರು ತೊಂದರೆಗೆ ಒಳಗಾಗಿದ್ದಾರೆ. ಮನೆ, ಭೂಮಿ, ಬೆಳೆ ಎಲ್ಲವನ್ನೂ ಕಳೆದುಕೊಂಡುದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನೆರೆ ಸ್ಥಿತಿ ವೀಕ್ಷಣೆಗೆ ಆಗಮಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ. ಕೇಂದ್ರ ಸರ್ಕಾರ ರೈತರು ಮತ್ತು ಬಡವರ ಬಗ್ಗೆ ಕಾಳಜಿ ಇರುವ ಸರ್ಕಾರವಲ್ಲ. ರಾಜ್ಯದಲ್ಲಿ ಭೀಕರ ಪ್ರವಾಹ ಬಂದಿದ್ದರೂ ಇದುವರೆಗೂ ರಾಜ್ಯಕ್ಕೆ ಒಂದು ರೂ. ಸಹ ಪರಿಹಾರ ಬಿಡುಗಡೆಯಾಗಿಲ್ಲ. ಜತೆಗೆ ರಾಜ್ಯದಲ್ಲಿ ಪ್ರವಾಹದಿಂದಾಗಿ ಇಷ್ಟಲ್ಲಾ ನಷ್ಟವಾಗಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿಲ್ಲ. ಅವರಿಗೆ ವಿದೇಶಕ್ಕೆ ಹೋಗಲು ಸಮಯ ಸಿಗುತ್ತದೆ. ಅವರು ವಿದೇಶದಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ಆಕ್ರೋಶ ವೆಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್, ರಾಮದುರ್ಗ ತಾಲೂಕುಗಳಲ್ಲಿ ಪ್ರವಾಹದಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.