ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯಗಳ ಸೇವನೆಯಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸಂಘ ಸಂಸ್ಥೆಗಳ ಸಹಕಾರ ತೀರಾ ಅಗತ್ಯವಾಗಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಮಿಥುನ್ಕುಮಾರ್ ಹೇಳಿದರು.
ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ ಮಾದಕ ವಸ್ತು ಮತ್ತು ಮಾದಕ ದ್ರವ್ಯ ವಿರೋದಿ ಸಪ್ತಹ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳು ಮತ್ತು ಜನಸಂದಣಿ ಪ್ರದೇಶಗಳಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯಗಳ ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ಜಿಲ್ಲೆಯನ್ನು ಮಾದಕ ವಸ್ತುಗಳಿಂದ ಮುಕ್ತ ಮಾಡಲು ಸಂಘ ಸಂಸ್ಥೆಗಳು ಸಹಕಾರ ಬಹಳ ಪ್ರಮುಖವಾಗಿದೆ ಎಂದರು.
ಜಿಲ್ಲೆಯಲ್ಲಿ ಜನಸಾಮಾನ್ಯರ ಆಸ್ತಿ ಪಾಸ್ತಿಗಳನ್ನು ಸಂರಕ್ಷಣೆ ಮಾಡುವ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಪ್ರಥಮ ಆದ್ಯತೆ ನೀಡಲಾಗಿದೆ ಪೋಲೀಸ್ ಇಲಾಖೆಯನ್ನು ಜನಸ್ನೇಹಿ ಮಾಡುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು ನಾಗರೀಕರು ಸಹ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾದಕ ವಸ್ತು ಮತ್ತು ಮಾದಕ ದ್ರವ್ಯ ವಿರೋದಿ ಸಪ್ತಾಹವನ್ನು ಯಶಸ್ವಿಗೊಳಿಸಲು ಸಹಕರಿಸಿದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಅಭಿನಂಧನಾ ಪತ್ರವನ್ನು ನೀಡಿ ಗೌರವಿಸಿದರು.
ಸಭೆಯಲ್ಲಿ ಚಿಕ್ಕಬಳ್ಳಾಪುರ ಡಿವೈಎಸ್ಪಿ ರವಿಶಂಕರ್, ಚಿಂತಾಮಣಿ ಡಿವೈಎಸ್ಪಿ ಲಕ್ಷ್ಮಯ್ಯ, ಜಿಲ್ಲೆಯ ವಿವಿಧ ಪೋಲೀಸ್ ಠಾಣೆಗಳ ಆರಕ್ಷಕ ವೃತ್ತ ನಿರೀಕ್ಷಕರುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ತೆಮೀಂ.ಅನ್ಸಾರಿ