ಶೀಘ್ರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ 11000 ವಸತಿಗೃಹ ನಿರ್ಮಾಣ : ಸಚಿವ ಬೊಮ್ಮಾಯಿ

ಮಂಗಳೂರು (www.vknews.com) : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಮುಂಬರುವ 5 ವರ್ಷಗಳಲ್ಲಿ 11000 ಕ್ಕೂ ಹೆಚ್ಚು ವಸತಿಗೃಹಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಅವರು ಇಂದು ನಗರದ ಪಣಂಬೂರಿನ ಪೊಲೀಸ್ ಠಾಣಾ ಸಮೀಪ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರಸ್ತತ ಸಾಲಿನ ಬಜೆಟ್ ನಲ್ಲಿ ಪೊಲೀಸ್ ಸಿಬ್ಬಂದಿ ವರ್ಗದವರಿಗೆ 11000 ಕ್ಕೂ ಹೆಚ್ಚು ವಸತಿ ಗೃಹ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ, 2025 ರೊಳಗೆ ಈ ಕಾರ್ಯ ಪೂರ್ಣಗೊಳ್ಳಲಿದೆ ಇದರಿಂದಾಗಿ ರಾಜ್ಯದಲ್ಲಿ ಶೇ.60 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ವಸತಿ ಸೌಕರ್ಯ ದೊರಕಲಿದೆ ಎಂದರು.

ದ.ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಗಳ 192 ವಸತಿಗೃಹಗಳ ನಿರ್ಮಾಣ ಮಾಡಬೇಕೆಂದು ಕೋರಿಕೆ ಬಂದಿದ್ದು , ಲಭ್ಯವಿರುವ ನಿವೇಶನದಲ್ಲಿ 100 ಕ್ಕೂ ಹೆಚ್ಚು ವಸತಿಗೃಹಗಳನ್ನು ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದ್ದು, ಬಾಕಿ ಉಳಿದ ವಸತಿಗೃಹ ನಿರ್ಮಾಣಕ್ಕೆ ನಿವೇಶನ ಲಭ್ಯವಾದ ಕೂಡಲೇ ನಿರ್ಮಾಣಕ್ಕೆ ಮುಂದಾಗಲಾಗುವುದು ಎಂದರು.

ಪೊಲೀಸ್ ಇಲಾಖೆಯಲ್ಲಿ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸುವ ಉದ್ದೇಶದಿಂದ ಅಗತ್ಯವಿರುವ ಆಧುನಿಕ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.

ಪೊಲೀಸ್ ಸಿಬ್ಬಂದಿಗಳ ಕುಟುಂಬಗಳ ಕಲ್ಯಾಣಾಭಿವೃದ್ದಿಗೆ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದ ಅವರು, ಪೊಲೀಸ್ ಸಿಬ್ಬಂದಿಯ ಮಕ್ಕಳ ಉನ್ನತ ಶಿಕ್ಷಣಕ್ಕೆ ಅಗತ್ಯ ಆರ್ಥಿಕ ನೆರವು ಕಲ್ಪಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಗೃಹ ಸಚಿವರು ವಸತಿಗೃಹಗಳ ಕೀ ಗಳನ್ನು ಸಾಂಕೇತಿಕವಾಗಿ ವಿತರಿಸಿದರು.
ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಡಾ.ಭರತ್‌ಶೆಟ್ಟಿ, ಉಡುಪಿ ಶಾಸಕ ರಘುಪತಿಭಟ್, ಮಹಾನಗರ ಪಾಲಿಕೆ ಸದಸ್ಯೆ ಸುಮಿತ್ರಾ ಕರಿಯಾ ಮತ್ತಿತರರು ಉಪಸ್ಥಿತರಿದ್ದರು.

 

ವಿಶ್ವ ಕನ್ನಡಿಗ ನ್ಯೂಸ್

  Leave Your Comment

  Your email address will not be published.*

  ಚಾಟ್ ಮಾಡಿ
  1
  VK News Official Chat
  ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...