ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ):- ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಜುಲೈ 19 ಮತ್ತು 22 ರಂದು ನಡೆಸಲಾಗುವುದು. ಪ್ರಶ್ನೆ ಪತ್ರಿಕೆ ಮತ್ತು ಓ.ಎಂ.ಆರ್ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ , ಯಾವುದೇ ಗೊಂದಲಗಳು ನಡೆಯದಂತೆ ಬಹಳ ಶ್ರದ್ದೆಯಿಂದ ಕೋವಿಡ್ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ಕೇಂದ್ರಗಳಲ್ಲಿ ಕರೋನಾ ಹರಡದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ// ಆರ್.ಸೆಲ್ವಮಣಿ ಅವರು ತಿಳಿಸಿದರು.
ಇಂದು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ , ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ , ಶಿಕ್ಷಕರಿಗೆ ಹಾಗೂ ಶಾಲೆಯ ಸಿಬ್ಬಂದಿಗೆ ಕರೋನ ಲಸಿಕೆ ನೀಡಿರುವುದರ ಬಗ್ಗೆ ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿಗಳಿಗೆ ಕೋವಿಡ್ ಮುಂಜಾಗೃತಾ ಕ್ರಮಗಳ ಬಗ್ಗೆ ತಿಳಿಸಿ , ಮಾಸ್ಕ್ , ಸ್ಯಾನಿಟೈಜ್ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ತಿಳಿಸಿ , ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಥರ್ಮಲ್ ಸ್ಯಾನ್ ಮಾಡಿ ಕೊಠಡಿಗೆ ಕಳುಹಿಸಿ , ಕೋವಿಡ್ ಲಕ್ಷಣಗಳು ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಕಲ್ಪಿಸಿ ಹಾಗೂ ಕರೋನಾ ಸೋಂಕಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ತಾಲ್ಲೂಕು ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಶಾಲೆಗಳನ್ನು ಗ್ರಾಮ ಪಂಚಾಯಿತಿ , ಪುರಸಭೆ , ನಗರ ಸಭೆ ವತಿಯಿಂದ ಸ್ಯಾನಿಟೈಜ್ ಮಾಡಿಸಲಾಗುವುದು ಹಾಗೂ ಆಶಾ ಕಾರ್ಯಕರ್ತೆಯರು ಆರೋಗ್ಯ ಸಿಬ್ಬಂದಿಯನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಪ್ರಶ್ನೆ ಪತ್ರಿಕೆ ಮತ್ತು ಓಎಂಆರ್ ಪತ್ರಿಕೆಗಳನ್ನು ಸುರಕ್ಷಿತವಾಗಿಡಿ , ಪ್ರಶ್ನೆಪತ್ರಿಕೆಯು ಯಾವುದೇ ಕಾರಣಕ್ಕೂ ಸೋರಿಕೆಯಾಗದಂತೆ ಎಚ್ಚರವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ ಅವರು ಮಾತನಾಡಿ , ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಗಳನ್ನು ಟಿಕ್ ಗುರುತು ( ಟಿಕ್ಮಾರ್ಕ್ ) ಮಾಡುವ ಮೂಲಕ ಉತ್ತರಿಸಬೇಕು ಹಾಗೂ ಪರೀಕ್ಷೆಯನ್ನು ಎರಡು ದಿನಗಳಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ ಮಕ್ಕಳಿಗೆ ಮುಂದಿನ ಸ್ಪರ್ಧಾ ಪರೀಕ್ಷೆಗಳನ್ನು ಎದುರಿಸಲು ಸಹಾಯವಾಗುತ್ತದೆ.
ಮಕ್ಕಳಿಗೆ ಪರೀಕ್ಷೆಯ ಬಗ್ಗೆ ಗಾಂಭೀರ್ಯತೆ ಇರಬೇಕು ಕೋವಿಡ್ ಬಗ್ಗೆ ಎಚ್ಚರವಹಿಸಿ ಪರೀಕ್ಷಾ ಕೊಠಡಿಗಳಿಗೆ ಗಾಳಿ ಬೆಳಕು ಸರಾಗವಾಗಿ ಬರುವಂತೆ ಇರಬೇಕು. ಕರೋನಾ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಅಡೆತಡೆಗಳು ಆಗದಂತೆ ಎಚ್ಚರವಹಿಸಿ ಜಿಲ್ಲೆಗೆ ಒಳ್ಳೆಯ ಹೆಸರು ಬರುವಂತೆ ಕಾರ್ಯನಿರ್ವಹಿಸಿ ಎಂದು ಅವರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಅವರು ಮಾತನಾಡಿ , ಜಿಲ್ಲೆಯಲ್ಲಿ ಈ ಸಾಲಿನಲ್ಲಿ 117 ಪರೀಕ್ಷಾ ಕೇಂದ್ರಗಳನ್ನು ಏರ್ಪಡಿಸಲಾಗಿದೆ. ಒಂದು ಕೊಠಡಿಗೆ 11 ವಿದ್ಯಾರ್ಥಿಗಳಂತೆ ಓ.ಎಂ.ಆರ್. ಮೂಲಕ ಎರಡು ದಿನಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ -19 ಸಂಕಷ್ಟದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ಎಲ್ಲಾ ಶಿಕ್ಷಕರಿಗೆ ಲಸಿಕೆಯನ್ನು ಹಾಕಿಸಲಾಗಿದೆ ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ಪಿ.ಪಿ.ಟಿ ಮೂಲಕ ಪರೀಕ್ಷೆಯನ್ನು ಹೇಗೆ ನಡೆಸುವುದು ಎಂಬ ತರಬೇತಿ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳಿಂದ 200 ಅಡಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಬೇಕು . ಹತ್ತಿರದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷೆ ವೇಳೆ ಮುಚ್ಚಿಸಬೇಕು , ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೋಲಿಸ್ ಬಂದೋಬಸ್ತ್ ಅನ್ನು ಒದಗಿಸಿಕೊಡಬೇಕು ಹಾಗೂ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳನ್ನು ಸಂರಕ್ಷಿಸುವುದಕ್ಕೆ ಭದ್ರತೆಯನ್ನು ಒದಗಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಸಭೆಯಲ್ಲಿ ಎಲ್ಲಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು , ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.