ಕೋಲಾರ( ವಿಶ್ವ ಕನ್ನಡಿಗ ನ್ಯೂಸ್ ):-ಕೋವಿಡ್ ಸಾಂಕ್ರಾಮಿಕದ 3 ನೇ ಅಲೆ ಬರುವ ಬಗ್ಗೆ ತಜ್ಞರು ತಿಳಿಸಿದ್ದು , ಈ ಅಲೆಯಲ್ಲಿ ಹೆಚ್ಚಾಗಿ ಮಕ್ಕಳ ಮೇಲೆ ಪ್ರಭಾವ ಬೀರಲಿದ್ದು , ನಾವೆಲ್ಲರೂ ಒಟ್ಟಾಗಿ ಇದನ್ನು ತಡೆದು ಜಿಲ್ಲೆಯನ್ನು ಕೋವಿಡ್ ಮುಕ್ತವಾಗಿಸಲು ಶ್ರಮಿಸೋಣ ಎಂದು ತೋಟಗಾರಿಕೆ ಮತ್ತು ಯೋಜನೆ ಹಾಗೂ ಸ್ಯಾಂಖಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕೊವಿಡ್ -19 ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಕೇರ್ ಸೆಂಟರ್ಗಳಲ್ಲಿ ಉತ್ತಮ ಸೌಕರ್ಯಗಳೊಂದಿಗೆ ಚಿಕಿತ್ಸೆ ನೀಡಿ , ಗುಣಮುಖರನ್ನಾಗಿ ಮಾಡಬೇಕು. ವಿಶೇಷವಾಗಿ ಈಗ ಮಕ್ಕಳ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ವಯಸ್ಕರಿಗೆ ಬಳಸುವ ವೆಂಟಿಲೇಟರ್ಗಳು ಮಕ್ಕಳಿಗೆ ಬಳಸಲು ಸಾಧ್ಯವಿಲ್ಲ. ಮಕ್ಕಳ ವೆಂಟಿಲೇಟರ್ಗಳನ್ನು ಸೋಮವಾರ ತರೆಸಿ ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದ ಅವರು ಆಸ್ಪತ್ರೆಗಳಲ್ಲಿ ಕನಿಷ್ಠ 100 ಹಾಸಿಗೆಗಳನ್ನು ಮಕ್ಕಳ ಚಿಕಿತ್ಸೆಗೆ ಮೀಸಲಿಡಬೇಕು ಎಂದರು.
ಮಕ್ಕಳಿಗೆ ಕೋವಿಡ್ ತಗುಲಿದರೆ ನೀಡಲಾಗುವ ಚಿಕಿತ್ಸೆ ಬಗ್ಗೆ ಅಧ್ಯಯನ ನಡೆಸಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ , ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಿ , ಪ್ರತಿಯೊಂದು ಜೀವವೂ ಅಮೂಲ್ಯ ಪ್ರತಿಯೊಬ್ಬರ ಜೀವ ಉಳಿಸಿ ಮಕ್ಕಳ ಭವಿಷ್ಯವನ್ನು ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುವವರಿಗೆ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇದ್ದರೆ ಮಾತ್ರ ಜಿಲ್ಲೆ ಪ್ರವೇಶಕ್ಕೆ ಅವಕಾಶ ನೀಡಿ. ಕೋವಿಡ್ ನೆಗೆಟಿವ್ ವರದಿಗಳ ಸತ್ಯಾ ಸತ್ಯತೆಯನ್ನು ಪರೀಕ್ಷಿಸಿ ವರದಿ ನೀಡಿರುವವರ ಮಾಹಿತಿ ಪಡೆದು ಪರಿಶೀಲನೆ ನಡೆಸಬೇಕು. ಒಂದು ವೇಳೆ ನೆಗೆಟಿವ್ ವರದಿ ನಕಲು ಆಗಿದ್ದರೆ , ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.
ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ ಅವರು ಮಾತನಾಡಿ , ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆಯನ್ನು ನಿಯಂತ್ರಿಸುವಲ್ಲಿ ಅಧಿಕಾರಿಗಳು ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲೆಯು ರಾಜ್ಯದಲ್ಲಿ 2 ನೇ ಅತಿ ಹೆಚ್ಚು ಲಸಿಕೆ ನೀಡಿರುವ ಜಿಲ್ಲೆಯಾಗಿದೆ. ಮಕ್ಕಳ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ | ಜಗದೀಶ್ ಅವರು ಮಾತನಾಡಿ , ಜಿಲ್ಲೆಯಲ್ಲಿ 267 ಕೋವಿಡ್ ಸಕ್ರಿಯ ಪ್ರಕರಣಗಳಿವೆ . ಪಾಸಿಟಿವಿಟಿ ರೇಟ್ ಶೇ .1.30 ರಷ್ಟಿವೆ . ಜಿಲ್ಲೆಯಲ್ಲಿ ಒಟ್ಟು 2729 ಬೆಡ್ಗಳಿವೆ , ಜಿಲ್ಲಾ ಎಸ್.ಎನ್.ಆರ್ . ಆಸ್ಪತ್ರೆ ಜಾಲಪ್ಪ ಆಸ್ಪತ್ರೆ ಹಾಗೂ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. 36 ಕೋವಿಡ್ ಕೇರ್ ಸೆಂಟರ್ಗಳನ್ನು ಗುರುತಿಸಲಾಗಿದೆ.
ಮುಂದಿನ ದಿನಗಳಲ್ಲಿ ಕೋವಿಡ್ 3 ನೇ ಅಲೆ ಬರುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಗೆ ಕ್ರಮವಾಗಿ ಜಿಲ್ಲೆಯಲ್ಲಿ ಹೆಚ್ಚಿನ ರೀತಿಯಲ್ಲಿ ಲಸಿಕೆ ನೀಡಲಾಗುತ್ತಿದೆ ಕೋವಿಡ್ ಬಂದ ಮಕ್ಕಳನ್ನು ಚಿಕಿತ್ಸೆ ಮಾಡಲು ವೈದ್ಯರಿಗೆ ತರಬೇತಿ ನೀಡಲಾಗಿದೆ. ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಮಕ್ಕಳ ಆರೈಕೆಯ ಬಗ್ಗೆ ತಾಯಂದಿರಲ್ಲಿ ಅರಿವು ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು. ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ಜಿಲ್ಲೆಗೆ ಪ್ರತಿ ದಿನ 15 ಸಾವಿರ ಡೋಸ್ಗಳಷ್ಟು ಲಸಿಕೆಯನ್ನು ಪೂರೈಸುವಂತೆ ಸಚಿವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ || ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮುಳಬಾಗಿಲು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್ , ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀನಿವಾಸಗೌಡ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು , ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿಗಳಾದ ಇಲಕ್ಕಿಯಾ ಕರುಣಾಕರನ್ , ಉಪ ವಿಭಾಗಾಧಿಕರಿಗಳಾದ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.