ಕೋಲಾರ(ವಿಶ್ವಕನ್ನಡಿಗ ನ್ಯೂಸ್): ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಜನವರಿ 12 ರಿಂದ ಜನವರಿ 18 ರವರೆಗೆ ಯುವ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಯುಕೇಶ್ ಕುಮಾರ್ ಅವರು ತಿಳಿಸಿದರು.
ಇಂದು ತಮ್ಮ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಸಪ್ತಾಹವನ್ನು ಆಚರಿಸಲಾಗುವುದು , ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಪ್ತಾಹವನ್ನು ಯಶ್ವಸ್ವಿಯಾಗಿ ಹಮ್ಮಿಕೊಳ್ಳಲಾಗುವುದು. ಸಪ್ತಾಹದಲ್ಲಿ ಯುವ ಸಮೂಹಕ್ಕೆ ಉತ್ತಮ ಸಂದೇಶಗಳನ್ನು ಮೂಡಿಸಬೇಕು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಹೆಚ್.ಗಂಗಾಧರ್ ಅವರು ಮಾತನಾಡಿ , ಜನವರಿ 17 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನೆಹರು ಯುವ ಕೇಂದ್ರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಕಾನೂನು ಸೇವೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಶಿಕಲಾ ಅವರು ಮಾತನಾಡಿ , ಕೋವಿಡ್ ಹೆಚ್ಚಳವಾಗುತ್ತಿದ್ದು , ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಯುವ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12 ರಂದು ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.