ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) :ಸರ್ಕಾರವು ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ,ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ , ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರಿಗೆ ಸೇವೆ ಮಾಡುವ ಮನೋಭಾವವನ್ನು ಅಧಿಕಾರಿಗಳು ಇಟ್ಟುಕೊಳ್ಳಬೇಕು. ಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಪ್ರೋತ್ಸಾಹ ನೀಡುವುದು ಸರ್ಕಾರದ ಜವಬ್ದಾರಿ ಅದನ್ನು ನಾವು ಮಾಡುತ್ತೇವೆ.
ಕಾಮಗಾರಿಗಳಲ್ಲಿ ಗುಣಮಟ್ಟ ಹಾಗೂ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಬೇಕು . ಮುಂದಿನ ದಿನಗಳಲ್ಲಿ ಪ್ರತಿಯೊಂದು ಇಲಾಖೆಯನ್ನು ಕುಲಂಕುಶವಾಗಿ ಪರಿಶೀಲನೆ ಮಾಡಿ ಜಿಲ್ಲೆಗೆ ಬೇಕಾಗಿರುವ ಅನುದಾನವನ್ನು ಮುಂದಿನ ಬಾರಿಯ ಬಜೆಟ್ನಲ್ಲಿ ಕೊಡಿಸಲಾಗುವುದು ಎಂದು ತಿಳಿಸಿದರು .
ಜಿಲ್ಲಾಧಿಕಾರಿಗಳಾದ ವೆಂಕಟರಾಜು ಅವರು ಮಾತನಾಡಿ , ನಾವು ಆರ್ಥಿಕ ವರ್ಷದ ಕೊನೆಯಲ್ಲಿ ಇದ್ದೇವೆ . ಜಿಲ್ಲೆಗೆ ಬಂದಿರುವ ಅನುದಾನ ವಾಪಸ್ ಹೋಗದಂತೆ ಸದ್ಬಳಕೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಸಭೆಯಲ್ಲಿ 25 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳು ಪ್ರಗತಿ ವರಧಿಯನ್ನು ಸಂಕ್ಷಿಪ್ತವಾಗಿ ಸಭೆಯಲ್ಲಿ ವಿವರಿಸಿದರು.
ಸಭೆಯಲ್ಲಿ ಕೋಲಾರ ಲೋಕಸಭಾ ಸಂಸದರಾದ ಎಸ್.ಮುನಿಸ್ವಾಮಿ , ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ದೇವರಾಜ್ , ಅಪರ ಜಿಲ್ಲಾಧಿಕಾರಿಗಳಾದ ಡಾ || ಸ್ನೇಹಾ , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.