ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಎಲ್ಲಾ ಮಾಹಿತಿ ಕೊಟ್ಟ ಗುತ್ತಿಗೆದಾರರ ಸಂಘದ ನಿಯೋಗ..
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ಸರಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹಿಡಿದು ಸಚಿವರುಗಳು, ಶಾಸಕರು ಪ್ರತಿಯೊಂದು ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮತ್ತೊಮ್ಮೆ ಪತ್ರ ಬರೆಯುವುದಾಗಿ ಕೆಂಪಣ್ಣ ಹೇಳಿದ್ದಾರೆ.
ಕೋಲಾರ ಜಿಲ್ಲೆ ಉಸ್ತುವಾರಿ ಸಚಿವ ಮುನಿರತ್ನ ಅವರ ಹೆಸರನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪಿಸಿರುವ ಗುತ್ತಿಗೆದಾರರ, ಕೆಲಸ ಮಂಜೂರು ಆಗಬೇಕೆಂದರೆ ಲಂಚ ಕೊಡಬೇಕು, ಇಲ್ಲದಿದ್ದರೆ ಗುತ್ತಿಗೆ ರದ್ದು ಮಾಡಲಾಗುವುದು, ಹಣ ಕಲೆಕ್ಟ್ ಮಾಡಿ ತನ್ನಿ ಎಂದು ತೋಟಗಾರಿಕೆ ಸಚಿವ ಮುನಿರತ್ನ ನೇರವಾಗಿ ಬೆದರಿಕೆ ಹಾಕುತ್ತಾರೆ ಎಂದು ಕೆಂಪಣ್ಣ ದೂರಿದ್ದಾರೆ.
ಕಳೆದ ಒಂದು ವರ್ಷ 2 ತಿಂಗಳಿಂದ ಹೋರಾಟ ಮಾಡುತ್ತಿದ್ದೇವೆ. ಸಿಎಂ ಮಾತಿಗೂ ಬೆಲೆ ಇಲ್ಲದಂತಾಗಿದೆ. ಮಾನ, ಮರ್ಯಾದೆ ಇಲ್ಲದ ಜನ ಪ್ರತಿನಿಧಿಗಳು ಇವರು. ಇನ್ನೂ 22 ಸಾವಿರ ಕೋಟಿ ಬಿಲ್ ಪೆಂಡಿಂಗ್ ಇದೆ. ಕೆಲವರದು 3 ವರ್ಷಗಳಿಂದ ಬಾಕಿ ಇದೆ. ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದಾಗಿದೆ. ಇದರಲ್ಲಿ ಬೊಮ್ಮಾಯಿ ಸೇರಿದಂತೆ ಎಲ್ಲರೂ ಇದ್ದಾರೆ. ಯಾರಿಗೂ ರ್ಯಾಂಕಿಂಗ್ ಕೊಡೋಕೆ ಆಗಲ್ಲ ಎಂದು ಹೇಳಿದರು.
ಈ ಮಧ್ಯೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿರುವ ಗುತ್ತಿಗೆದಾರರ ಸಂಘದ ನಿಯೋಗ, ಸಿದ್ದರಾಮಯ್ಯ ಅವರಿಗೆ ನಾವು ಎಲ್ಲಾ ಮಾಹಿತಿ ಕೊಟ್ಟಿದ್ದೇವೆ. ಸದನದಲ್ಲಿ ಅದನ್ನು ಪ್ರಸ್ತಾಪಿಸುತ್ತೇನೆ ಎಂಬ ಭರವಸೆ ನೀಡಿದ್ದಾರೆ. ಆದರೆ ನಾನು ಯಾವುದೇ ದಾಖಲೆಗಳನ್ನು ಸಿದ್ದರಾಮಯ್ಯಗೆ ಕೊಟ್ಟಿಲ್ಲ. ನ್ಯಾಯಾಂಗ ತನಿಖೆ ಮಾಡಿದರೆ ಮಾತ್ರ ದಾಖಲೆ ಕೊಡುತ್ತೇವೆ. ದಾಖಲೆಯನ್ನು ನಾನು ಬಹಿರಂಗ ಪಡಿಸಿದರೆ ಗುತ್ತಿಗೆದಾರರಿಗೆ ತೊಂದರೆ ಆಗುತ್ತದೆ ಎಂಬ ಭಯ ಇದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.