ಉಡುಪಿ (ವಿಶ್ವ ಕನ್ನಡಿಗ ನ್ಯೂಸ್ ):ಸಮಾಜದಲ್ಲಿ ದುರ್ಬಲರಾದ ಮಹಿಳೆ ಮತ್ತು ಮಕ್ಕಳ ರಕ್ಷಣೆ ಹಾಗೂ ಅವರುಗಳ ಮೇಲಾಗುವ ಶೋಷಣೆಗಳ ವಿರುದ್ಧ ಬೆನ್ನೆಲುಬಾಗಿ ಅವರ ಪರ ನಿಂತು ಕಾನೂನಿನ ಅಡಿಯಲ್ಲಿ ಎಲ್ಲಾ ರೀತಿಯ ಅವಶ್ಯವಿರುವ ನೆರವುಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಮಹಿಳೆಯರ ಸಬಲೀಕರಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಮುಖ ಉದ್ದೇಶವಾಗಿದ್ದು, ಅವರುಗಳಿಗೆ ಸಮಾಜದಲ್ಲಿನ ಬಲಿಷ್ಠ ವರ್ಗದವರಿಂದ ದೌರ್ಜನ್ಯಗಳು ಉಂಟಾದ ಬಗ್ಗೆ ಮಾಹಿತಿಗಳು ತಲುಪಿದ ತತ್ಕ್ಷಣದಲ್ಲಿ ಅವರುಗಳಿಗೆ ಸಾಂತ್ವನ ಹೇಳುವುದರ ಜೊತೆಗೆ ಸರ್ಕಾರದ ಎಲ್ಲಾ ರೀತಿಯ ಸೌಲಭ್ಯ ಹಾಗೂ ನೆರವುಗಳನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೆಕು ಎಂದರು.ಇವರುಗಳ ಶ್ರೇಯೋಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳು ಕಾರ್ಯಕ್ರಮಗಳು ಹಾಗೂ ಅವರ ರಕ್ಷಣೆಗೆ ವಿಶೇಷ ಕಾಯಿದೆಗಳನ್ನು ಜಾರಿಗೆ ತಂದಿದೆ. ಇವುಗಳ ಬಗ್ಗೆ ಮೊಬೈಲ್ ವಾಹನಗಳ ಮೂಲಕ ಅರಿವು ಮೂಡಿಸುವುದರ ಜೊತೆಗೆ ಸರ್ಕಾರದ ವಿವಿಧ ವೈಯಕ್ತಿಕ ಸವಲತ್ತುಗಳ ಫಲಾನುಭವಿಗಳನ್ನಾಗಿಸಬೇಕು ಎಂದರು.ಮಕ್ಕಳ ವೈಯಕ್ತಿಕ ಬೆಳವಣಿಗೆ ಮತ್ತು ಉತ್ತಮ ಜೀವನಕ್ಕೆ ಅವಶ್ಯಕವಾದ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಸೇರಿದಂತೆ ಇತರೆ ಎಲ್ಲಾ ಆಯಾಮಗಳಲ್ಲಿ ಸಂಪೂರ್ಣ ಭಾಗವಹಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.ಮಹಿಳೆಯರು ಸ್ವಾವಲಂಭಿಗಳಾಗಲು ಅವರುಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಒತ್ತು ಕೊಡುವ ಮೂಲಕ ಅವರುಗಳ ದುಡಿಯುವ ಶಕ್ತಿ ಹಾಗೂ ಜೀವನಮಟ್ಟವನ್ನು ಹೆಚ್ಚಿಸಲು ಮುಂದಾಗಬೇಕು ಎಂದರು.ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಮೇಲ್ಕಾಣಿಸದೇ ಇದ್ದರೂ ಕೆಲವೊಂದು ಪ್ರಕರಣಗಳು ಸಂಭವಿಸುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಬಾಲ್ಯ ವಿವಾಹದಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗಳು ಕುಂಠಿತವಾಗುವ ಬಗ್ಗೆ ಅರಿವು ಮೂಡಿಸಿ, ಬಾಲ್ಯ ವಿವಾಹ ಮುಕ್ತ ಸಮಾಜಕ್ಕೆ ಮುಂದಾಗಬೇಕು ಎಂದು ಸೂಚನೆ ನೀಡಿದರು.ನೊಂದ ಮಹಿಳೆಗೆ ಎಲ್ಲಾ ರೀತಿಯ ನೆರವು ನೀಡಲು ಜಿಲ್ಲೆಯಲ್ಲಿ ಆರಂಭಿಸಿರುವ ಸಖೀ ಒನ್ ಸ್ಟಾಪ್ ಸೆಂಟರ್ನ ಪ್ರಯೋಜನವನ್ನು ವಿವಿಧ ಬಗೆಯ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸಖೀ ಕೇಂದ್ರದಲ್ಲಿ ದಾಖಲಾದ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಿ ನೊಂದ ಮಹಿಳೆಗೆ ಅಗತ್ಯವಿರುವ ಎಲ್ಲಾ ರೀತಿಯ ಸೂಕ್ತ ನೆರವು ಮತ್ತು ನ್ಯಾಯ ಒದಗಿಸುವಂತೆ ಹಾಗೂ 24*7 ಮಹಿಳಾ ಸಹಾಯವಾಣಿ ಸಂಖ್ಯೆ 181 ಬಗ್ಗೆ ಹೆಚ್ಚಿನ ಅರಿವು ಮೂಡಿಸುವಂತೆ ತಿಳಿಸಿದರು.ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎ.ಎಸ್ಪಿ. ಸಿದ್ಧಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವೀಣಾ ವಿವೇಕಾನಂದ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.