ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಯಾದಗರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಕಾಲೇಜುಗಳ ಸ್ಥಾಪನೆಗೆ ಶೀಘ್ರವೇ ಕಾರ್ಯತಂತ್ರ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.
ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾಪವನ್ನು ರಾಜ್ಯ ವಕ್ಫ್ ಬೋರ್ಡ್ ಸರಕಾರಕ್ಕೆ ಸಲ್ಲಿಸಿತ್ತು.ಇದಕ್ಕೆ ಸರಕಾರದ ಅನುಮೋದನೆ ಸಿಕ್ಕಿದ್ದು, ಪ್ರತಿ ಕಾಲೇಜಿಗೆ 2.5 ಕೋಟಿ ರೂ.ಅನುದಾನವನ್ನೂ ಮೀಸಲಿರಿಸಲಾಗಿದೆ ಎನ್ನಲಾಗಿದೆ. ಮುಂದಿನ ತಿಂಗಳು ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಾದ್ಯಂತ ಇರುವ ವಕ್ಫ್ ಆಸ್ತಿಯಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ಭಾಗಗಳಲ್ಲಿ ಕಾಲೇಜು ಆರಂಭಿಸಲಾಗುತ್ತದೆ ಎಂದು ತಿಳಿದುಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನ 16 ಎಕರೆ ಜಾಗದಲ್ಲಿ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆಗೆ ಜಾಗ ಗುರುತಿಸಲಾಗಿದೆ ಎನ್ನಲಾಗಿದೆ.
ಶಂಕುಸ್ಥಾಪನೆ ನೆರವೇರಿದ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಕೂಡಲೇ ಆರಂಭವಾಗಲಿದ್ದು, 2024-25ನೇ ಸಾಲಿನಿಂದ ಕಾಲೇಜುಗಳು ಆರಂಭವಾಗುವ ನಿರೀಕ್ಷೆಯಿದೆ. ಆರಂಭದಲ್ಲಿ ಪ್ರಥಮ ಪಿಯುಸಿ ಆರಂಭವಾಗಲಿದ್ದು, ಬಳಿಕ ಪದವಿವರೆಗೂ ಕಾಲೇಜು ಕಾರ್ಯಾಚರಿಸಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.