ಶಿಡ್ಲಘಟ್ಟ,(ವಿಶ್ವ ಕನ್ನಡಿಗ ನ್ಯೂಸ್) : ಶಿಡ್ಲಘಟ್ಟ ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿ ಪ್ರಯುಕ್ತ ಸೋಮವಾರ ವಿಶೇಷ ಪೂಜೆ ನಡೆಸಲಾಯಿತು.
ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ವಿಶೇಷವಾಗಿ ಆಚರಿಸಲಾಯಿತು. ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯ ಕಲ್ಯಾಣೋತ್ಸವ ಹಾಗೂ ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭಕ್ತಿಗೀತೆ, ಭಾವಗೀತೆ, ಭೋಜನ ವ್ಯವಸ್ಥೆ ಮಾಡಲಾಗಿತ್ತು.
ಭಾನುವಾರ ರಾತ್ರಿ ಗ್ರಾಮದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ಮಾಡಲಾಯಿತು. ಹೂವಿನ ಪಲ್ಲಕ್ಕಿಯ ಉತ್ಸವಕ್ಕೆ ನೂರಾರು ಮಂದಿ ಸಾಕ್ಷಿಯಾದರು. ದೇವಾಲಯ ಹಾಗೂ ಗ್ರಾಮದ ಪ್ರಮುಖ ರಸ್ತೆಗಳನ್ನೆಲ್ಲಾ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಹನುಮಜಯಂತಿಯ ಪ್ರಯುಕ್ತ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಮೂಡಿದ್ದು, ಭಕ್ತರು ವಿವಿಧ ತಾಲ್ಲೂಕು ಜಿಲ್ಲೆಗಳಿಂದ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು.
ವಿವಿಧೆಡೆ ಹನುಮ ಜಯಂತಿ: ತಾಲ್ಲೂಕಿನ ನಾಗಮಂಗಲ ಗ್ರಾಮದ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯದಲ್ಲಿ ಹನುಮಜಯಂತಿಯನ್ನು ಆಚರಿಸಲಾಯಿತು. ಚೋಳರ ಕಾಲದ ಅಭಯ ಹಸ್ತಾಂಜನೇಯಸ್ವಾಮಿ ದೇವಾಲಯ ತಾಲ್ಲೂಕಿನ ಪುರಾತನ ದೇವಾಲಯಗಳಲ್ಲಿ ಒಂದಾಗಿದೆ. ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಾಲಯ, ಅಪ್ಪೇಗೌಡನಹಳ್ಳಿ ಗೇಟ್ ಬಯಲಾಂಜನೇಯಸ್ವಾಮಿ ದೇವಾಲಯ, ದೊಡ್ಡದಾಸರಹಳ್ಳಿಯ ಮುತ್ತಾಂಜನೇಯ ಸ್ವಾಮಿ ದೇವಾಲಯ, ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯ, ಮಯೂರ ವೃತ್ತದ ಆಂಜನೇಯಸ್ವಾಮಿ, ಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯಸ್ವಾಮಿ ದೇಗುಲ, ಮುತ್ತೂರು ಗ್ರಾಮ, ಎಚ್.ಕ್ರಾಸ್ ಶ್ರೀ ಸೀತಾರಾಮಾಂಜಿನೇಯ ಸ್ವಾಮಿ ದೇವಾಲಯ, ಚೊಕ್ಕಂಡಹಳ್ಳಿ, ಎದ್ದಲತಿಪ್ಪೇನಹಳ್ಳಿ, ಜಂಗಮಕೋಟೆ ಕ್ರಾಸ್ ಮುಂತಾದೆಡೆ ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ ಆಚರಿಸಲಾಯಿತು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.