ಕೋಲಾರ ( ವಿಶ್ವ ಕನ್ನಡಿಗ ನ್ಯೂಸ್ ):ಆರೋಗ್ಯವೇ ಭಾಗ್ಯ , ಮನುಷ್ಯನಿಗೆ ದೈಹಿಕ ಆರೋಗ್ಯದಷ್ಟೆ ಮಾನಸಿಕ ಆರೋಗ್ಯವು ಮುಖ್ಯವಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶುಕ್ಲಾಕ್ಷ ಪಾಲನ್ ಅವರು ಹೇಳಿದರು.
ಇಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಅರಿವು ಕಾರ್ಯಗಾರ ಕುರಿತ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಪ್ರತಿಯೊಬ್ಬ ಪ್ರಜೆ ಮಾನಸಿಕ ಆರೋಗ್ಯ ಕಾಪಾಡಿಕೊಂಡಾಗ ಮಾತ್ರವೇ ನೆಮ್ಮದಿಯಿಂದ ಬದುಕಲು ಸಾಧ್ಯವಿದ್ದು , ಆ ನಿಟ್ಟಿನಲ್ಲಿ ಮೇ 27 ರಂದು ದೇವರಾಜ್ ಅರಸ್ ಮೆಡಿಕಲ್ ಕಾಲೇಜಿನಲ್ಲಿ ನಡೆಯಲಿರುವ ಮಾನಸಿಕ ಆರೋಗ್ಯ ಅರಿವು ಕಾರ್ಯಾಗಾರವನ್ನು ಜನತೆ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಅರೋಗ್ಯ ಮನುಷ್ಯನಿಗೆ ಅತಿ ಮುಖ್ಯವಾಗಿದೆ ಅನೇಕ ವಿಚಾರಗಳಿಂದ ಹಾಗೂ ಗೊಂದಲಗಳಿಂದ ಸ್ವಂತವಾಗಿ ಆರೋಗ್ಯವನ್ನು ಕಳೆದುಕೊಳ್ಳತ್ತಾರೆ. ಸರಕಾರ ಮಾನಸಿಕ ಆರೋಗ್ಯ ಕುರಿತಂತೆ ಅನೇಕ ಕಾರ್ಯಕ್ರಮಗಳು ಹಾಗೂ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು , ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ನಡೆಸಬೇಕಾಗಿದೆ ಮಾನಸಿಕ ಆರೋಗ್ಯದ ಮಹತ್ವ ಅವಶ್ಯಕತೆ ಇದೆ ಎಂದರು.
ಪ್ರಸ್ತುತವಾಗಿ ಸಮಾಜದಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಮಾನಸಿಕ ಆರೋಗ್ಯದಲ್ಲಿ ಉಂಟಾಗುವ ಏರುಪೇರು ಕಾರಣವಾಗಿದೆ. ಸದೃಢ ಮಾನಸಿಕ ಆರೋಗ್ಯ ಹೊಂದಿದ್ದಲ್ಲಿ ಎಂತಹ ಸಮಸ್ಯೆಗಳನ್ನಾದರೂ ಸಹ ಸುಲಭ ರೀತಿಯಲ್ಲಿ ಎದುರಿಸಬಹುದು. ದುರ್ಬಲ ಮನಃಸ್ಥಿತಿಯನ್ನು ಹೊಂದಿರುವವರು ಎಲ್ಲಾ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಾರೆ.
ಮಾನಸಿಕ ಆರೋಗ್ಯದ ಮೇಲೆ ಪ್ರಭಾವ ಬೀರುವ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಜೀವನದಲ್ಲಿ ಹೊಂದಾಣಿಕೆಯಿಂದ ಜೀವಿಸುವುದನ್ನು ರೂಢಿಸಿಕೊಳ್ಳಬೇಕು.ಮಾನಸಿಕ ಆರೋಗ್ಯದೊಂದಿಗೆ ದೈಹಿಕ ಸಮತೋಲನ ಕಾಪಾಡಿಕೊಳ್ಳಬೇಕು. ಮಾನಸಿಕ ಬುದ್ಧಿಶಕ್ತಿ ಬೆಳವಣಿಗೆಗೆ ಪೂರಕವಾಗುವ ಆಹಾರ ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ವ್ಯಾಯಾಮ ಸಹ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಿದೆ ಎಂದು ಹೇಳಿದರು.
ಈ ನಿಟ್ಟಿನಲ್ಲಿ ಮೇ 27 ರಂದು ಶನಿವಾರ ನಗರದ ಹೊರವಲಯದ ದೇವರಾಜ್ ಅರಸ್ ಮೆಡಿಕಲ್ ಕಾಲೇಜು ಆವರಣದ ಸಿಲ್ವರ್ ಜ್ಯೂಬ್ಲಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ , ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಮತ್ತು ಜಿಲ್ಲಾ ನ್ಯಾಯಾಂಗ ಇಲಾಖೆ , ಇವರ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯದ ಅರಿವು ಕಾರ್ಯಾಗಾರ ನಡೆಯಲಿದೆ. ಇಲಾಖಾವಾರು ಜವಾಬ್ದಾರಿ ವಹಿಸಿಕೊಂಡು ಕಾರ್ಯಾಗಾರವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ್ ಅವರು ಮಾತನಾಡಿ ಕೆಲಸದ ಒತ್ತಡದಿಂದ ಮಾನಸಿಕ ಖಾಯಿಲೆಗಳು ಹೆಚ್ಚಾಗುತ್ತಾ ಇದೆ. ಆ ನಿಟ್ಟಿನಲ್ಲಿ ಈ ಕಾರ್ಯಾಗಾರ ನಡೆಯಲಿದೆ. ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಮಾರ್ಗದರ್ಶಕರಾದ ನ್ಯಾಯಮೂರ್ತಿ ಎನ್.ಕುಮಾರ್ , ಮಾನಸಿಕ ಆರೋಗ್ಯ ಪ್ರಾಧಿಕಾರದ ಅಧ್ಯಕ್ಷ ಟಿ.ಕೆ ಅನಿಲ್ ಕುಮಾರ್ ಸೇರಿದಂತೆ ಅನೇಕ ಮಾನಸಿಕ ಆರೋಗ್ಯ ತಜ್ಞರು , ಜಿಲ್ಲಾ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್.ಹೊಸಮನಿ , ಮಾನಸಿಕ ಆರೋಗ್ಯ ಕಾರ್ಯಕ್ರಮದ ಅನುಷ್ಠಾನ ಅಧಿಕಾರಿ ಡಾ | ಎನ್.ಸಿ ನಾರಾಯಣಸ್ವಾಮಿ , ಮನೋವೈದ್ಯರಾದ ಡಾ || ವಿಜೇತ ದಾಸ್ , ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮ ಇದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.