ಕೋಲಾರ,(ವಿಶ್ವಕನ್ನಡಿಗ ನ್ಯೂಸ್): ಕೋಲಾರ ಜಿಲ್ಲೆಯನ್ನು ಇಡೀ ರಾಜ್ಯದಲ್ಲಿ ಮಾದರಿ ಮಾಡಬೇಕೆಂಬ ಸಂಕಲ್ಪದೊಂದಿಗೆ ಕಾರ್ಯಪ್ರವೃತ್ತರಾಗಿರುವ ಜಿಲ್ಲಾಧಿಕಾರಿ ಅಕ್ರಮ್ಪಾಷ ಅವರು ಈಗಾಗಲೇ ಅನೇಕ ರೀತಿಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಮೂಲಕ ಜಿಲ್ಲೆಯ ಜನರ ಗಮನ ಸೆಳೆದಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸುವ ಸಲುವಾಗಿ ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸುವ ಜೊತೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾಯಿತ ಪ್ರತಿನಿಧಿಗಳ ಸಹಕಾರದೊಂದಿಗೆ ಕೋಲಾರ ಜಿಲ್ಲೆಯಲ್ಲಿ ಅನೇಕ ರೀತಿಯ ಬದಲಾವಣೆಗಳನ್ನು ತರಲು ಶ್ರಮಿಸುತ್ತಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ ಈಗಾಗಲೇ ಮತಗಟ್ಟೆ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಕನಿಷ್ಟ ಲೋಕಸಭಾ ಚುನಾವಣೆಗೆ 1500 ಮತದಾರರು ಒಳಗೊಂಡಂತೆ ಒಂದು ಮತಗಟ್ಟೆ ಕೇಂದ್ರಗಳನ್ನು ತೆರೆದು ಅಲ್ಲಿ ಸಕಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ದೃಢ ಹೆಜ್ಜೆ ಇಟ್ಟಿದ್ದಾರೆ ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕೆಲವೊಂದು ಗ್ರಾಮಗಳ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮನೆಮನೆಗೆ ಭೇಟಿ ನೀಡಿ ಮತದಾರರ ಸಮೀಕ್ಷೆ ನಡೆಸುವ ಸಲುವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಚುನಾವಣೆ ಘೋಷಣೆ ಆಗುವ ಮೊದಲೆ ಮತದಾರರ ಪಟ್ಟಿಯಲ್ಲಿ ಲೋಪದೋಷಗಳಾಗಿದ್ದರೆ ಅದನ್ನು ಕೂಡಲೇ ಸರಿಪಡಿಸುವ ಕೆಲಸವನ್ನು ಮಾಡಬೇಕು ಯಾರು ಸಹ ಅರ್ಹ ಮತದಾರರು ಮತದಾನದಿಂದ ವಂಚಿತಗೊಳ್ಳದಂತೆ ಎಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳು ಅಧಿಕಾರಿಗಳ ಸಭೆ ನಡೆಸಿದ ನಂತರ ಕೋಲಾರ ತಾಲೂಕಿನ ವೇಮಗಲ್ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ನಾಡ ಕಚೇರಿಯನ್ನು ಪರಿಶೀಲಿಸಿ ಉದ್ಘಾಟನೆಗೆ ತ್ವರಿತವಾಗಿ ಸಜ್ಜುಗೊಳಿಸಬೇಕೆಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು ನಂತರ ಕ್ಯಾಲನೂರು ಗ್ರಾಪಂಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಅಭಿವೃದ್ದಿ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಿ ಗ್ರಾಪಂ ವ್ಯಾಪ್ತಿಯಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಂಡು ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದರು.
ತದನಂತರ ಗ್ರಾಮದಲ್ಲಿರುವ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ರೋಗಿಗಳು ಮತ್ತು ಅವರ ಸಂಬಂಧಿಕರೊಂದಿಗೆ ಸಮಾಲೋಚನೆ ನಡೆಸಿ ಆಸ್ಪತ್ರೆಯಲ್ಲಿ ಯಾವ ರೀತಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಚಿಕಿತ್ಸೆಗೆ ಎಂದು ಬರುವವರೊಂದಿಗೆ ಸೌಜನ್ಯವಾಗಿ ವರ್ತಿಸಿ ಸಕಾಲದಲ್ಲಿ ಉತ್ತಮ ರೀತಿಯ ಚಿಕಿತ್ಸೆ ನೀಡಿ ಬಡಜನರ ಆರೋಗ್ಯವನ್ನು ಕಾಪಾಡಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕ್ಯಾಲನೂರು ಗ್ರಾಪಂಯ ಅಧ್ಯಕ್ಷ ಎನ್.ರಮೇಶ್, ಮುತುವಲ್ಲಿ ಷೇಕ್ ಸಿರಾಜುದ್ದೀನ್, ಸಿಲ್ಕ್ ಸೊಸೈಟಿಯ ಅಧ್ಯಕ್ಷ ಷೇಕ್ ಮೆಹಮೂದ್, ಗ್ರಾಪಂ ಸದಸ್ಯರಾದ ಎನ್.ಲೋಕೇಶ್, ನವೀನ್, ಕೆ.ವಿ. ರಾಮಣ್ಣ, ಲೋಕೇಶ್, ಸುರೇಶ್, ಅಬ್ದುಲ್ ಖಾದರ್, ನಿವೃತ್ತ ಮುಖ್ಯ ಶಿಕ್ಷಕ ಸಿರಾಜ್ವುಲ್ಲಾ ಬೇಗ್, ಗ್ರಾಮ ಲೆಕ್ಕಾಧಿಕಾರಿ ಸಲ್ಮಾನ್, ಅಬ್ದುಲ್ ಖಾದರ್ ಸಾಬ್ಜಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.