ಮೊರೆನಾ (www.vknews.in) | ಮಧ್ಯಪ್ರದೇಶದ ಮೊರೆನಾದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಮಹಿಳೆಯ ಹುಟ್ಟಲಿರುವ ಮಗು ಗರ್ಭದಲ್ಲೇ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ರೂರವಾಗಿ ಹಲ್ಲೆಗೊಳಗಾದಾಗ ಮಹಿಳೆ ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಕಳೆದ ಶುಕ್ರವಾರ ಮೂವರು ಪುರುಷರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿದ್ದು, ಗ್ವಾಲಿಯರ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂಬಾಲಾ ಪಟ್ಟಣದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ಚಂದಕಾಪುರ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.
ಮಹಿಳೆಯೋರ್ವರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಬಗ್ಗೆ ಚರ್ಚಿಸಲು ಆರೋಪಿಗಳು ಗ್ರಾಮಕ್ಕೆ ಬಂದಿದ್ದರು, ಪ್ರಕರಣದಲ್ಲಿ ಗರ್ಭಿಣಿ ಮಹಿಳೆಯ ಪತಿ ಆರೋಪಿ ಎನ್ನಲಾಗುತ್ತಿದೆ ಎಂದು ಅಂಬಾಲಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಲೋಕ್ ಪರಿಹಾರ್ ತಿಳಿಸಿದ್ದಾರೆ. ಚರ್ಚೆ ನಡೆದ ಮನೆಯಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಮತ್ತು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.