ಮಂಗಳೂರು (www.vknews.in) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಬಿಡದೇ ಮಳೆ ಸುರಿಯುತ್ತಿದ್ದು, ಸುರಿಯುತ್ತಿರುವ ಭಾರೀ ಮಳೆಗೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರದಲ್ಲಿ ಮಂಗಳವಾರ ನಸುಕಿನ ಜಾವ ನಡೆದ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದು ಕಂಪೌಂಡ್ ಗೋಡೆ ಮನೆಯ ಗೋಡೆ ಮೇಲೆ ಉರುಳಿ ಈ ಸಾವು ಸಂಭವಿಸಿದೆ. ಮನೆಯೊಳಗೆ ವಾಸ್ತವ್ಯವಿದ್ದ ರಿಹಾನ ಮಂಝಿಲ್ ಮನೆಯ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮೃತಪಟ್ಟಿದ್ದಾರೆ.
ರಾತ್ರಿ ಊಟ ಮುಗಿಸಿ ಮಲಗಿದವರು ಬೆಳಗ್ಗೆ ಶವವಾದರು.. ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ನಿರ್ವಹಣೆ ಕಾರ್ಯ ನಿರ್ವಹಿಸುತ್ತಿದ್ದರು. ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಹೊತ್ತಿಗೆ ಶವವಾಗಿದ್ದಾರೆ. ಧಾರಾಕಾರ ಮಳೆ ಸುರಿದ ಪರಿಣಾಮ ಕಂಪೌಂಡ್ ಗೋಡೆ ಹಾಗೂ ಎರಡು ಅಡಕೆ ಮರ ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ.
ರಿಹಾನಾ ಹಾಗೂ ರಿಫಾನ ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ತೆರಳುತ್ತಿದ್ದರು. ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಯಾಸಿರ್ ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದೆಯಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿದ್ದು, ಯಾವುದೇ ಪ್ರಾಣಾಪಾಯವಾಗಿರಲಿಲ್ಲ ಎನ್ನಲಾಗಿದೆ.
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ , ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ. ದೊಡ್ಡಮಗಳು ರಶೀನಾಳನ್ನು ಕೇರಳ ಕಡೆಗೆ ವಿವಾಹ ಮಾಡಿಕೊಡಲಾಗಿದ್ದು, ಬಕ್ರೀದ್ ಗೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು. ತನಿಖೆ ಮುಂದುವರಿದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.