ಕೋಲಾರ (www.vknews.in) : ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸಬಾರದು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಇಂದು ಕೆಜಿಎಫ್ ನಗರಸಭೆ ಆವರಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಮಳೆಯ ಅಭಾವವಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಬಾರದು ಎಂಬುದು ಸರ್ಕಾರದ ಸ್ಪಷ್ಟ ಆದೇಶವಾಗಿದೆ ಎಂದು ಸಚಿವರು ತಿಳಿಸಿದರು.
ನೀರಿನ ಸಮಸ್ಯೆ ತೀವ್ರವಾಗಬಹುದಾದ ವಾರ್ಡ್ಗಳನ್ನು ಗುರುತಿಸಿ, ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಿದರು. ನೀರಿನ ಮೂಲಗಳಿಲ್ಲದ ಪ್ರದೇಶಗಳಲ್ಲಿ ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆಗೆ ಪಡೆಯುವುದು ಅಥವಾ ಟ್ಯಾಂಕರ್ಗಳ ಮೂಲಕ ಸಮರ್ಪಕವಾಗಿ ನೀರು ಪೂರೈಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರು ನೀರಿನ ಸಮಸ್ಯೆ ಕುರಿತು ದೂರು ನೀಡಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ತಾಕೀತು ಮಾಡಿದರು.
ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿದ ಸಚಿವರು, ಅನುದಾನದ ಬಳಕೆ ಮತ್ತು ಗುಣಮಟ್ಟದ ಕುರಿತು ಮಾಹಿತಿ ಪಡೆದರು. ಕುಡಿಯುವ ನೀರು, ರಸ್ತೆ ಸಂಪರ್ಕ ಹಾಗೂ ಒಳಚರಂಡಿ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಬೇಕು.ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಯುದ್ಧೋಪಾದಿಯಲ್ಲಿ ಸದ್ಬಳಕೆ ಮಾಡಿಕೊಂಡು ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಬೇಕು. ಅಧಿಕಾರಿಗಳು ಕಚೇರಿಗಳಿಗೆ ಮಾತ್ರ ಸೀಮಿತವಾಗದೆ, ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸಿ ಜನರ ವಿಶ್ವಾಸ ಗಳಿಸಬೇಕು ಎಂದು ಸೂಚಿಸಿದರು.
ಕೆಜಿಎಫ್ ಶಾಸಕಿ ರೂಪಕಲಾ ಎಂ. ಶಶಿಧರ್ ಅವರು ಗಣಿ ನಾಡಿನ ಜನರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಕ್ಷೇತ್ರದ ಹೊಸ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಮುರಳೀಧರ, ಪೌರಾಡಳಿತ ನಿರ್ದೇಶನಾಲಯದ ಬಸವರಾಜು, ಜಂಟಿ ನಿರ್ದೇಶಕ ಕೃಷ್ಣಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ, ತಹಶೀಲ್ದಾರ್ ಭರತ್ ಹಾಗೂ ವಿವಿಧ ನಗರಸಭೆಗಳ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.