ಕೋಲಾರ (www.vknews.in) : ಜಿಲ್ಲೆಯ ಸರ್ಕಾರಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಸುರಕ್ಷತೆ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿತನವನ್ನು ಸಹಿಸಲಾಗುವುದಿಲ್ಲ. ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ ಪರಿಣಾಮ ಅನಾಹುತಗಳು ಸಂಭವಿಸಿದರೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಹಾಗೂ ಶಾಲೆಯ ಮುಖ್ಯ ಶಿಕ್ಷಕರನ್ನು ನೇರ ಹೊಣೆಗಾರರನ್ನಾಗಿ ಮಾಡಿ ತಕ್ಷಣವೇ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ.ಬಾಗೇವಾಡಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಇತ್ತೀಚೆಗೆ ಕೋಲಾರ ತಾಲ್ಲೂಕಿನ ಶಾಲೆಯೊಂದರಲ್ಲಿ ಮೇಲ್ಚಾವಣಿ ಕುಸಿದು ಶಿಕ್ಷಕರೊಬ್ಬರು ಗಾಯಗೊಂಡ ಘಟನೆ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತುರ್ತು ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯ ಎಲ್ಲಾ ಬಿಇಒಗಳು ಹಾಗೂ ಸಿಡಿಪಿಒಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದರು.
ಜಿಲ್ಲೆಯಾದ್ಯಂತ ಶಿಥಿಲಾವಸ್ಥೆಯಲ್ಲಿರುವ ಹಾಗೂ ತುರ್ತು ದುರಸ್ತಿ ಅಗತ್ಯವಿರುವ ಶಾಲಾ ಕೊಠಡಿಗಳು ಮತ್ತು ಅಂಗನವಾಡಿ ಕೇಂದ್ರಗಳ ಸಮಗ್ರ ವರದಿಯನ್ನು ಮುಂದಿನ ಮೂರು ದಿನಗಳೊಳಗೆ ಡಿಡಿಪಿಐ ಮುಖಾಂತರ ಸಲ್ಲಿಸಬೇಕು ಎಂದು ಗಡುವು ವಿಧಿಸಿದರು. ಅಪಾಯದ ಮುನ್ಸೂಚನೆ ಇರುವ ಕೊಠಡಿಗಳಿಂದ ಮಕ್ಕಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದರು. ತಾಲೂಕುವಾರು ಪರಿಶೀಲನೆಯಲ್ಲಿ ಬಂಗಾರಪೇಟೆ ತಾಲೂಕಿನ 63 ಕಟ್ಟಡಗಳು, ಕೆಜಿಎಫ್ನ 24 ಕೊಠಡಿಗಳು ಸೇರಿದಂತೆ ಕೋಲಾರ, ಮಾಲೂರು, ಶ್ರೀನಿವಾಸಪುರ ಹಾಗೂ ಮುಳಬಾಗಿಲು ತಾಲೂಕುಗಳಲ್ಲಿಯೂ ಮೈನರ್ ಹಾಗೂ ಮೇಜರ್ ರಿಪೇರಿ ಅಗತ್ಯವಿರುವ ಕಟ್ಟಡಗಳ ಪಟ್ಟಿ ಸಭೆಗೆ ಸಲ್ಲಿಸಲಾಯಿತು.
ಕಟ್ಟಡ ದುರಸ್ತಿಗಾಗಿ ಲಭ್ಯವಿರುವ ಅನುದಾನದ ವಿವರಗಳನ್ನು ಪರಿಶೀಲಿಸಿದ ಸಿಇಒ, ಸಾಮಾನ್ಯ ದುರಸ್ತಿಗೆ 143.49 ಲಕ್ಷ ರೂ., ಎಸ್ಸಿ ಬಿಡುಗಡೆ ಅಡಿಯಲ್ಲಿ 70.21 ಲಕ್ಷ ರೂ. ಹಾಗೂ ಎಸ್ಟಿ ಬಿಡುಗಡೆ ಅಡಿಯಲ್ಲಿ 28.08 ಲಕ್ಷ ರೂ. ಅನುದಾನ ಲಭ್ಯವಿದೆ ಎಂದು ತಿಳಿಸಿದರು. ಈ ಅನುದಾನವನ್ನು ಬಳಸಿಕೊಂಡು ಪಿಆರ್ಇಡಿ ಅಧಿಕಾರಿಗಳು ತಕ್ಷಣ ದುರಸ್ತಿ ಕಾಮಗಾರಿ ಆರಂಭಿಸಬೇಕು ಎಂದು ಸೂಚಿಸಿದರು. ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನೂ ಗುರುತಿಸಿ, ಅವುಗಳ ದುರಸ್ತಿ ಅಥವಾ ಹೊಸ ಕಟ್ಟಡ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಗಳ ಸಹಕಾರ ಪಡೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ಶಾಲೆಯಲ್ಲೂ ಜಲಜೀವನ್ ಮಿಷನ್ ಅಡಿಯಲ್ಲಿ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಡ್ಡಾಯವಾಗಿ ಕಲ್ಪಿಸಬೇಕು. ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕ ಸ್ವಚ್ಛ ಶೌಚಾಲಯಗಳ ವ್ಯವಸ್ಥೆ ಇರಬೇಕು ಎಂದು ಸೂಚಿಸಿದ ಅವರು, ಶಾಲಾ ಆವರಣದಲ್ಲಿ ಔಷಧೀಯ ಸಸ್ಯಗಳನ್ನು ಒಳಗೊಂಡ ‘ಧನ್ವಂತರಿ ವನ’ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ತಿಳಿಸಿದರು.
ಇದೇ ವೇಳೆ, ಜಿಲ್ಲೆಯ ಕೆಲವು ಭಾಗಗಳಲ್ಲಿ ವಿಶೇಷವಾಗಿ ಕೋಲಾರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಮೊದಲ ತರಗತಿ ದಾಖಲಾತಿ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 30 ಶೇಕಡಾ ಇಳಿಕೆಯಾಗಿದೆ ಎಂಬುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ದ್ವಿಭಾಷಾ ಬೋಧನೆ (ಇಂಗ್ಲಿಷ್ ಹಾಗೂ ಕನ್ನಡ ಮಾಧ್ಯಮ) ಸೌಲಭ್ಯ ಕುರಿತು ಸಾರ್ವಜನಿಕರಲ್ಲಿ ಕರಪತ್ರಗಳ ಮೂಲಕ ಜಾಗೃತಿ ಮೂಡಿಸಬೇಕು. ಶಿಕ್ಷಕರು ಮನೆಮನೆಗೆ ಭೇಟಿ ನೀಡಿ ಪೋಷಕರನ್ನು ಮನವೊಲಿಸುವ ಮೂಲಕ ದಾಖಲಾತಿ ಹೆಚ್ಚಿಸಲು ಜನಾಂದೋಲನ ರೂಪದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕೈಗಾರಿಕಾ ವಲಯಗಳು ಹೆಚ್ಚುತ್ತಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಮೂರು ಗ್ರಾಮ ಪಂಚಾಯಿತಿಗಳಿಗೆ ಒಂದರಂತೆ ಸಿಎಸ್ಆರ್ ಮಾದರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ದೊಡ್ಡ ಕಂಪನಿಗಳ ಸಹಯೋಗದೊಂದಿಗೆ ಶಾಲೆಗಳಿಗೆ ಅಗತ್ಯವಿರುವ ಆಧುನಿಕ ಸೌಲಭ್ಯಗಳನ್ನು ಒದಗಿಸಲು ಬಿಇಒಗಳು ಅಗತ್ಯಗಳ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ. ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್, ಜಿಲ್ಲೆಯ ಎಲ್ಲಾ ಬಿಇಒಗಳು ಹಾಗೂ ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.