ಕೋಲಾರ (www.vknews.in): ಕೋಲಾರ ಜಿಲ್ಲಾ ಎನ್ಎಸ್ಯುಐ ನೂತನ ಅಧ್ಯಕ್ಷರಾಗಿ ನಿಹಾಲ್ ತರೀನ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಆದೇಶ ಹೊರಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್, ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳನ್ನು ಸಂಘಟಿಸಿ ಎನ್ಎಸ್ಯುಐ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು. ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ನಡೆಸಬೇಕು ಎಂದು ಸೂಚಿಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಿಹಾಲ್ ತರೀನ್ ಸಂತಸ ವ್ಯಕ್ತಪಡಿಸಿ, ನನಗೆ ಈ ಜವಾಬ್ದಾರಿ ನೀಡಿದ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹಾಗೂ ಮಾಜಿ ಜಿಲ್ಲಾ ಅಧ್ಯಕ್ಷ ಭರತ್ ರಾಯ್ ಅವರಿಗೆ ಧನ್ಯವಾದಗಳು. ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸುವ ಕೆಲಸ ಮಾಡುತ್ತೇನೆ. ಜಿಲ್ಲೆಯ ಕಾಲೇಜು ಮಟ್ಟದ ಚುನಾವಣೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾಂಗ್ರೆಸ್ ಪಕ್ಷವನ್ನು 2028ರಲ್ಲಿಯೂ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಹೇಳಿದರು.
ಕೋಲಾರ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಹಕಾರದಿಂದ ಎನ್ಎಸ್ಯುಐ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ತಿಳಿಸಿದರು. ಈ ಹಿಂದೆ ಭರತ್ ರಾಯ್ ಜಿಲ್ಲಾ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಹಾಗೂ ರಿಯಾಜ್ ಗೋರು ಉಪಾಧ್ಯಕ್ಷರಾಗಿದ್ದ ವೇಳೆ ತಾವು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾಗಿ ನಿಹಾಲ್ ತರೀನ್ ಹೇಳಿದರು. ತಮ್ಮ ತಂದೆ ದಿವಂಗತ ಮುಶೀರ್ ಕೂಡ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದನ್ನು ಸ್ಮರಿಸಿ, ಅವರ ಆದರ್ಶದಂತೆ ಕೆಲಸ ಮಾಡುವುದಾಗಿ ತಿಳಿಸಿದರು.
ತಮಗೆ ಅಭಿನಂದನೆ ಸಲ್ಲಿಸಿದ ಕೋತ್ತೂರು ಮಂಜುನಾಥ್, ನಸೀರ್ ಅಹ್ಮದ್, ಅನೀಲ್ ಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಸ್.ಎನ್. ನಾರಾಯಣಸ್ವಾಮಿ, ನಂಜೇಗೌಡ, ರೂಪ ಶಶೀಧರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಹಾಲ್ ತರೀನ್ ಕೃತಜ್ಞತೆ ಸಲ್ಲಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.