ಕೋಲಾರ (www.vknews.in): ಮುಳಬಾಗಿಲು ನಗರಸಭೆಯ ಆಡಳಿತ ಮತ್ತು ಸಾರ್ವಜನಿಕ ಸೇವೆಗಳ ನಿರ್ವಹಣೆಯಲ್ಲಿ ಹಲವು ಲೋಪಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪೌರಾಯುಕ್ತ ಆಂಜನೇಯಲು ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಎಂ.ಆರ್. ರವಿ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.
ಜೂನ್ 24ರಂದು ಜಿಲ್ಲಾಧಿಕಾರಿಗಳು ನಗರಸಭೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ ವೇಳೆ ಇ-ಆಸ್ತಿ ಸೇವೆ, ದಾಖಲೆಗಳ ನಿರ್ವಹಣೆ, ತೆರಿಗೆ ವಸೂಲಾತಿ, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್), ಘನತ್ಯಾಜ್ಯ ನಿರ್ವಹಣೆ ಹಾಗೂ ಬೀದಿಬದಿ ವ್ಯಾಪಾರಿಗಳ ಪುನರ್ವಸತಿ ಸೇರಿದಂತೆ ಹಲವು ವಿಷಯಗಳಲ್ಲಿ ಆಡಳಿತಾತ್ಮಕ ಲೋಪಗಳು ಬೆಳಕಿಗೆ ಬಂದಿವೆ. ಇ-ಆಸ್ತಿ ವ್ಯವಸ್ಥೆಯಲ್ಲಿ 67 ಅರ್ಜಿಗಳು ಬಾಕಿ ಉಳಿದಿರುವುದು, ನಿಗದಿತ ಅವಧಿಯಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸಲು ವಿಫಲವಾಗಿರುವುದು ಮತ್ತು ಈ ಹಿಂದೆ ಸೂಚಿಸಿದ್ದರೂ ದಾಖಲೆ ಕೊಠಡಿಯನ್ನು ಸಮರ್ಪಕವಾಗಿ ವ್ಯವಸ್ಥೆಗೊಳಿಸದಿರುವುದು ಪರಿಶೀಲನೆಯಲ್ಲಿ ಕಂಡುಬಂದಿದೆ. ದಾಖಲೆಗಳ ನಿರ್ವಹಣೆಯಲ್ಲೂ ನಿರ್ಲಕ್ಷ್ಯ ವಹಿಸಿರುವುದನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.
ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಅಂಗಡಿ ಬಾಡಿಗೆ ವಸೂಲಾತಿಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದರ ಜೊತೆಗೆ, ತೆರಿಗೆ ಪಾವತಿಗೆ ನೀಡಿದ್ದ ರಿಯಾಯಿತಿಯ ಕುರಿತು ಸಮರ್ಪಕ ಪ್ರಚಾರ ನಡೆಸದ ಕಾರಣ ವಸೂಲಾತಿ ಕುಂಠಿತವಾಗಿದೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ನೇಮಕ ಹಾಗೂ ಸಾರ್ವಜನಿಕ ಪ್ರಕಟಣೆ ಹೊರಡಿಸುವಂತೆ ನೀಡಿದ್ದ ಸೂಚನೆಗಳನ್ನು ಪಾಲಿಸದಿರುವುದು, ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಕೆಲವು ಬಿಲ್ಗಳನ್ನು ಆಡಳಿತಾಧಿಕಾರಿಗಳ ಅನುಮೋದನೆ ಇಲ್ಲದೆ ಪಾವತಿಸಿರುವುದು ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ಗುರುತಿಸುವ ಕಾರ್ಯ ಬಾಕಿ ಉಳಿದಿರುವುದೂ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.
ಈ ಎಲ್ಲವನ್ನು ಕರ್ತವ್ಯ ಲೋಪ ಹಾಗೂ ಆಡಳಿತಾತ್ಮಕ ನಿರ್ಲಕ್ಷ್ಯ ಎಂದು ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ನೋಟಿಸ್ ಸ್ವೀಕರಿಸಿದ 24 ಗಂಟೆಗಳೊಳಗೆ ಲಿಖಿತ ಸಮಜಾಯಿಷಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ ಕರ್ನಾಟಕ ನಾಗರಿಕ ಸೇವೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ-1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.