ಕೋಲಾರ ( www.vknews.in ): ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್ಐಆರ್) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದಲ್ಲಿ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ ನಡೆಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರ ಮಾರ್ಗದರ್ಶನದಲ್ಲಿ ನಡೆದ ಜಾಥಾದಲ್ಲಿ ವಿವಿಧ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಚುನಾವಣಾ ಸಾಕ್ಷರತಾ ಕ್ಲಬ್ ಸದಸ್ಯ ವಿದ್ಯಾರ್ಥಿಗಳು ಭಾಗವಹಿಸಿದರು. ಬಂಗಾರಪೇಟೆ ಸರ್ಕಲ್ನಿಂದ ಆರಂಭವಾದ ಜಾಥಾ ಡೂಮ್ಲೈಟ್ ಸರ್ಕಲ್, ಕ್ಲಾಕ್ ಟವರ್, ಬಸ್ ನಿಲ್ದಾಣ, ದೊಡ್ಡಪೇಟೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
ಈ ವೇಳೆ ವಿದ್ಯಾರ್ಥಿಗಳು ಎಸ್ಐಆರ್ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕರೂ ಕಡ್ಡಾಯವಾಗಿ ಭಾಗವಹಿಸಿ ಮತದಾನದ ಹಕ್ಕು ಖಚಿತಪಡಿಸಿಕೊಳ್ಳುವಂತೆ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜೂನ್ 30ರಿಂದ ಜುಲೈ 29ರವರೆಗೆ ವಿಶೇಷ ಸಮಗ್ರ ಪರಿಷ್ಕರಣೆ ನಡೆಯಲಿದ್ದು, ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರಂ ವಿತರಿಸಲಿದ್ದಾರೆ. ಅರ್ಹ ಮತದಾರರು ಕಡ್ಡಾಯವಾಗಿ ಫಾರಂ ಭರ್ತಿ ಮಾಡಿ ಸಲ್ಲಿಸಬೇಕು. ಹೊಸ ಮತದಾರರ ಸೇರ್ಪಡೆ, ವಿಳಾಸ ಹಾಗೂ ಭಾವಚಿತ್ರ ತಿದ್ದುಪಡಿಗೆ ಅವಕಾಶವಿದ್ದು, ಮೃತರು ಹಾಗೂ ಅನರ್ಹರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆಯೂ ನಡೆಯಲಿದೆ ಎಂದು ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಜಾಥಾದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಹೆಚ್.ಎನ್. ಮಂಜುನಾಥಸ್ವಾಮಿ, ಸಹಾಯಕ ಕಾರ್ಯದರ್ಶಿ ವಿ. ವೆಂಕಟಾಚಲಪತಿ, ಸಹಾಯಕ ಸಾಂಖ್ಯಿಕ ಅಧಿಕಾರಿ ಕೃಷ್ಣಮೂರ್ತಿ, ವಿವಿಧ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.