ಕೋಲಾರ ( www.vknews.in ): ದೇವರು ಕೊಟ್ಟಿದ್ದನ್ನು ಇತರರೊಂದಿಗೆ ಹಂಚಿಕೊಂಡು ಬಡವರು ಹಾಗೂ ಅಗತ್ಯವಿರುವವರಿಗೆ ನೆರವಾಗುವ ಸೇವಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಮತ್ತು ಶಾಂತಿ ದೊರೆಯುತ್ತದೆ ಎಂದು ಎಲ್.ಜಿ. ಫೌಂಡೇಷನ್ ಸಂಸ್ಥಾಪಕ ಎಂ.ಲಕ್ಷ್ಮಣ್ ಗೌಡ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಹಾಗೂ ಎಲ್.ಜಿ. ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಹಾಗೂ ಜಿಲ್ಲೆಯ 11 ಸರ್ಕಾರಿ ಶಾಲೆಗಳ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್, ನೋಟ್ಪುಸ್ತಕ ಸೇರಿದಂತೆ ವಿವಿಧ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು. ಜೀವನದಲ್ಲಿ ಸಾಕಷ್ಟು ಸಂಪಾದನೆ ಮಾಡಿದ ಬಳಿಕ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಕುಟುಂಬದವರ ಪ್ರೋತ್ಸಾಹದೊಂದಿಗೆ ಸಮಾಜಸೇವೆಗೆ ಮುಂದಾಗಿದ್ದು, ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ದೊರೆಯುತ್ತಿದೆ ಎಂದು ಹೇಳಿದರು.
ರಾಜಕೀಯ ಉದ್ದೇಶಕ್ಕಾಗಿ ಸೇವೆ ಮಾಡುತ್ತಿದ್ದಾರೆ ಎಂಬ ತಪ್ಪು ಕಲ್ಪನೆ ಕೆಲವರಲ್ಲಿದೆ. ಆದರೆ ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದವೇ ದೊಡ್ಡ ಸಂಪತ್ತು. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು ಎಂಬ ಆಶಯದಿಂದ ಈ ಶೈಕ್ಷಣಿಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು. ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮಹತ್ವದ ಹೊಣೆಗಾರಿಕೆ ಹೊಂದಿದ್ದಾರೆ. ಯಾವುದೇ ಸಂದರ್ಭದಲ್ಲೂ ತಮ್ಮ ಸ್ವಾಭಿಮಾನ, ವೃತ್ತಿನಿಷ್ಠೆ ಹಾಗೂ ಮೌಲ್ಯಗಳನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಇತ್ತೀಚೆಗೆ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಯನ್ನು ಎಲ್.ಜಿ. ಫೌಂಡೇಷನ್ ವತಿಯಿಂದ ದತ್ತು ಪಡೆದು ಉನ್ನತ ಶಿಕ್ಷಣಕ್ಕೆ ನೆರವು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಅಧ್ಯಕ್ಷ ಕೆ.ಎಸ್. ಗಣೇಶ್ ಮಾತನಾಡಿ, ಸಂಘದ ವತಿಯಿಂದ ಸದಸ್ಯರಿಗೆ ಬಡ್ಡಿರಹಿತ ಸಾಲ, ಯಶಸ್ವಿನಿ ಕಾರ್ಡ್ ವಿತರಣೆ ಹಾಗೂ ಸದಸ್ಯತ್ವ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗುತ್ತಿದೆ. ಇದೀಗ ಮೊದಲ ಬಾರಿಗೆ ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡಿ ಸರ್ಕಾರಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗಿದೆ. ಇದಕ್ಕೆ ಎಲ್.ಜಿ. ಫೌಂಡೇಷನ್ ಸಂಸ್ಥಾಪಕ ಎಂ. ಲಕ್ಷ್ಮಣ್ ಗೌಡ ಅವರ ಸಹಕಾರ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. ಯಾವುದೇ ಪ್ರತಿಫಲ ಅಥವಾ ರಾಜಕೀಯ ನಿರೀಕ್ಷೆಯಿಲ್ಲದೆ ಲಕ್ಷ್ಮಣ್ ಗೌಡ ಅವರು ಸಮಾಜಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ. ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಎಲ್.ಜಿ. ಫೌಂಡೇಷನ್ ನಿರ್ದೇಶಕಿ ಎಲ್.ಎಸ್. ಲತಾ ಲಕ್ಷ್ಮಣ್ ಗೌಡ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಪ್ರತಿಭೆಯಲ್ಲಿ ಯಾರಿಗೂ ಕಡಿಮೆಯಿಲ್ಲ. ಸರ್ಕಾರಿ ಶಾಲೆಗಳಿಂದಲೇ ಅನೇಕ ಮಹನೀಯರು ಹೊರಹೊಮ್ಮಿದ್ದಾರೆ. ವಿದ್ಯಾರ್ಥಿಗಳು ಶ್ರಮಪಟ್ಟು ವಿದ್ಯಾಭ್ಯಾಸ ಮಾಡಿ ಪೋಷಕರಿಗೂ ದೇಶಕ್ಕೂ ಕೀರ್ತಿ ತರಬೇಕು ಎಂದು ಕರೆ ನೀಡಿದರು.
ಸಹಕಾರ ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್ ಮಾತನಾಡಿ, 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಘವು ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೂ ಶೈಕ್ಷಣಿಕ ನೆರವು ಸೇರಿದಂತೆ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಮಾನ್ಯತೆ ಪಡೆದ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ. ಸದಾನಂದ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಎಂ. ಲಕ್ಷ್ಮಣ್ ಗೌಡ ಅವರು ನೀಡುತ್ತಿರುವ ಶೈಕ್ಷಣಿಕ ನೆರವು ಸಮಾಜಕ್ಕೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎ.ಜಿ. ಸುರೇಶ್ ಕುಮಾರ್, ಖಜಾಂಚಿ ರಾಜೇಂದ್ರ ಸಿಂಹ ಬಿ.ಎಲ್., ಜಿಲ್ಲಾ ಕಾರ್ಯದರ್ಶಿ ಶಕ್ತರ್, ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಹೆಚ್.ಎನ್. ಮುರಳೀಧರ್, ಸಹಕಾರ ಸಂಘದ ನಿರ್ದೇಶಕರು, ಜಿಲ್ಲೆಯ ವಿವಿಧ ತಾಲ್ಲೂಕುಗಳ ಪತ್ರಕರ್ತರು, ವಿವಿಧ ಸರ್ಕಾರಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.