ಕೋಲಾರ ( www.vknews.in ): ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಸೋಮವಾರ ಅಧಿಕೃತ ಚಾಲನೆ ದೊರೆಯಿತು. ಅಭಿಯಾನದ ಮೊದಲ ದಿನವೇ ಜಿಲ್ಲಾಧಿಕಾರಿ ಅವರು ಖುದ್ದಾಗಿ ಬೂತ್ ಮಟ್ಟದ ಅಧಿಕಾರಿಗಳ (BLO) ಜತೆ ಮತದಾರರ ಮನೆಗಳಿಗೆ ಭೇಟಿ ನೀಡಿ ಗಣತಿ (Enumeration) ನಮೂನೆಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೋಲಾರ ನಗರದ ವಿವಿಧ ಬೂತ್ ವ್ಯಾಪ್ತಿಗಳಲ್ಲಿ ಮನೆ ಮನೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮತದಾರರಿಗೆ ನಮೂನೆಗಳನ್ನು ವಿತರಿಸಿ ಅವುಗಳನ್ನು ಸರಿಯಾಗಿ ಭರ್ತಿ ಮಾಡುವ ಕುರಿತು ಮಾಹಿತಿ ನೀಡಿದರು. ಅಲ್ಲದೆ, ಬೂತ್ ಮಟ್ಟದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿರುವ ವಿಧಾನವನ್ನು ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಮತದಾರರ ಪಟ್ಟಿಯ ನಿಖರತೆ, ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು. ಮತದಾರರು ತಮ್ಮ ಹೆಸರು, ವಿಳಾಸ, ವಯಸ್ಸು ಸೇರಿದಂತೆ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಬೂತ್ ಮಟ್ಟದ ಅಧಿಕಾರಿಗಳು ಪ್ರತಿಯೊಂದು ಮನೆಗೂ ಭೇಟಿ ನೀಡಿ ಅರ್ಹ ಮತದಾರರ ಮಾಹಿತಿಯನ್ನು ನಿಖರವಾಗಿ ಸಂಗ್ರಹಿಸಬೇಕು. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹ ಹೆಸರುಗಳು ಉಳಿಯದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಕಾರ್ಯಕ್ರಮದಲ್ಲಿ ಕೋಲಾರ ನಗರಸಭೆ ಆಯುಕ್ತ ವೆಂಕಟೇಶ್, ರಾಜಸ್ವ ನಿರೀಕ್ಷಕ ರಾಜೇಂದ್ರ ಪ್ರಸಾದ್, ನಗರಸಭೆಯ ಹಿರಿಯ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.