ಬೀದರ್ (www.vknews.in) : ಪಕ್ಕದ ಮನೆಯ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿಯನ್ನು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪದಲ್ಲಿ ಭಾರತೀಯ ಸೇನೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಭಗವತ್ ಜ್ಞಾನೇಶ್ವರ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ದಂಪತಿಗೆ ಎರಡು ವರ್ಷಗಳ ಹಿಂದೆ ವಿವಾಹವಾಗಿತ್ತು. ಅವರು ಬೀದರ್ ನಗರದ ಶಿವನಗರದಲ್ಲಿ ವಾಸವಾಗಿದ್ದರು. ಈ ವೇಳೆ ಭಗವತ್ ಪಕ್ಕದ ಮನೆಯ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎನ್ನಲಾಗಿದ್ದು, ಇದನ್ನು ಪತ್ನಿ ಸಂಜನಾ ಪ್ರಶ್ನಿಸಿದ್ದರಿಂದ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು.
ಘಟನೆಯ ದಿನ ಭಗವತ್, ಸಂಜನಾಳನ್ನು ಕಾರಿನಲ್ಲಿ ಹೊನ್ನಿಕೇರಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು, ಕಾರಿನಲ್ಲಿದ್ದ ಕಬ್ಬಿಣದ ರಾಡ್ನಿಂದ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಸಂಜನಾಳನ್ನು ತಕ್ಷಣ ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.