ಬೆಂಗಳೂರು (www.vknews.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಆಯೋಜಿಸುವ ಪ್ರಸ್ತಾವನೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.
ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳವನ್ನು ಸೇರಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಒಂದು ಕಡೆ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಿದ್ಧತೆಗಳು ನಡೆಯುತ್ತಿರುವಾಗ, ಮತ್ತೊಂದೆಡೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.
ದಸರಾ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಯದುವೀರ್ ಒಡೆಯರ್, ಕಂಬಳವು ರಾಜ್ಯದ ಹೆಮ್ಮೆಯ ಸಾಂಪ್ರದಾಯಿಕ ಕ್ರೀಡೆಯಾದರೂ ಅದನ್ನು ಕರಾವಳಿ ಭಾಗದಲ್ಲೇ ಅದ್ಧೂರಿಯಾಗಿ ಆಚರಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ದಸರಾ ಮಹೋತ್ಸವಕ್ಕೆ ತನ್ನದೇ ಆದ ಪರಂಪರೆ ಮತ್ತು ವೈಶಿಷ್ಟ್ಯವಿದ್ದು, ಅದರಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಇದೇ ವಿಚಾರವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, “ನಮ್ಮ ದಸರಾ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ? ರಾಜ್ಯದಲ್ಲಿ ಸವದತ್ತಿ ಎಲ್ಲಮ್ಮನ ಜಾತ್ರೆ, ಕರಾವಳಿಯ ಕಂಬಳ ಹಾಗೂ ಮೈಸೂರು ದಸರಾಗೆ ತನ್ನದೇ ಆದ ವಿಶಿಷ್ಟ ಪರಂಪರೆ ಮತ್ತು ಮಹತ್ವವಿದೆ. ನಮಗೆ ಕಂಬಳದ ಮೇಲೆ ಯಾವುದೇ ವಿರೋಧವಿಲ್ಲ. ಆದರೆ, ದಸರಾದ ಪರಂಪರೆಯೇ ಬೇರೆ. ಅದರ ಸಾಂಪ್ರದಾಯಿಕ ಚೌಕಟ್ಟಿನಲ್ಲೇ ದಸರಾ ನಡೆಯಬೇಕು. ದಸರಾ ಒಳಗೆ ಬೇರೆ ಬೇರೆ ಆಚರಣೆಗಳನ್ನು ಬಲವಂತವಾಗಿ ಸೇರಿಸುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಕುರಿತು ಪರ-ವಿರೋಧದ ಚರ್ಚೆ ಮುಂದುವರಿದಿದ್ದು, ಈ ಕುರಿತು ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.