ಭಿವಾಂಡಿ (www.vknews.in): ಮಹಾರಾಷ್ಟ್ರದ ಭಿವಾಂಡಿಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡದ ಒಂದು ಭಾಗ ಕುಸಿದು ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಕುಸಿದ ಕಟ್ಟಡವನ್ನು ‘ಕೊಹಿನೂರ್’ ಎಂದು ಗುರುತಿಸಲಾಗಿದ್ದು, ಅದರ ಒಂದು ಭಾಗ ಏಕಾಏಕಿ ಕುಸಿದಿದೆ. ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF), ಥಾಣೆ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಜಂಟಿಯಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತರಲ್ಲಿ ಶಮೀಮ್ ಶೇಖ್ (32) ಮತ್ತು ಮಿರಾಜ್ ರಸೂಲ್ ಶೇಖ್ (34) ಅವರನ್ನು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಅಭಯ್ ಯಾದವ್ (26), ದೀಪಕ್ ಯಾದವ್ (25) ಮತ್ತು ಸಂಗೀತಾ ಪ್ರಜಾಪತಿ (36) ಸೇರಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಕಟ್ಟಡ ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ಪುರಸಭೆ ಈಗಾಗಲೇ ಎಚ್ಚರಿಕೆ ನೀಡಿತ್ತು. ಎಚ್ಚರಿಕೆಯ ಬಳಿಕ ಹಲವು ಕುಟುಂಬಗಳು ಕಟ್ಟಡವನ್ನು ಖಾಲಿ ಮಾಡಿದ್ದರೂ, ದುರಸ್ತಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರು ಒಳಗಿದ್ದಾಗ ಕಟ್ಟಡದ ಒಂದು ಭಾಗ ಕುಸಿದಿದೆ ಎಂದು ತಿಳಿದುಬಂದಿದೆ.
ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ಅಧಿಕಾರಿಗಳು ತಳ್ಳಿಹಾಕಿಲ್ಲ. ಘಟನೆ ಕುರಿತು ಹೆಚ್ಚಿನ ತನಿಖೆ ಆರಂಭಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.