ಬೆಂಗಳೂರು (www.vknews.in): ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಚಿವ ಪ್ರಿಯಾಂಕ್ ಖರ್ಗೆ, “ಸಮಾಜಘಾತುಕತನವನ್ನು ಕಣಕಣದಲ್ಲೂ ಮೈಗೂಡಿಸಿಕೊಂಡಿರುವ ಬಿಜೆಪಿಗರಿಗೆ ಕೇಸ್ ಹಾಕದೆ ಮುದ್ದು ಮಾಡಿ, ಲಾಲಿ ಹಾಡುತ್ತಾ ಮಲಗಿಸಬೇಕೆ?” ಎಂದು ಪ್ರಶ್ನಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಶಾಸಕ ಭರತ್ ಶೆಟ್ಟಿ ಅವರ ವಿಡಿಯೊವನ್ನು ಹಂಚಿಕೊಂಡಿರುವ ಅವರು, ಸಮಾಜದಲ್ಲಿ ದ್ವೇಷದ ವಿಷ ಬಿತ್ತಲು ಯತ್ನಿಸುವ ಯಾರೇ ಆಗಿದ್ದರೂ ಕಾನೂನು ಕ್ರಮಕ್ಕೆ ಒಳಪಡಲೇಬೇಕು ಎಂದು ಹೇಳಿದ್ದಾರೆ.
ಕಾನೂನು ಪಾಲನೆ ಮಾಡುವ ಪೊಲೀಸರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಭರತ್ ಶೆಟ್ಟಿ ಬಿಜೆಪಿ ಸಂಸ್ಕೃತಿಯ ಪ್ರತಿನಿಧಿಯಂತೆ ವರ್ತಿಸಿದ್ದಾರೆ ಎಂದು ಟೀಕಿಸಿದ ಅವರು, ಶಾಸಕ ಅಥವಾ ಸಂಸದರಾಗಿದ್ದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದರು.
“ಪೊಲೀಸರು ಖಾಕಿ ಧರಿಸಿ ಕಾನೂನು ಪಾಲನೆ ಮಾಡುತ್ತಿದ್ದಾರೆ. ಬಿಜೆಪಿಗರಂತೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜಘಾತುಕ ಕೆಲಸಗಳನ್ನು ಮಾಡುತ್ತಿಲ್ಲ” ಎಂದು ಕಿಡಿಕಾರಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ತಾವು ಸಂವಿಧಾನ ಹಾಗೂ ಕಾನೂನಿಗಿಂತ ಮೇಲಿದ್ದೇವೆ ಎಂಬ ಭ್ರಮೆಯಿಂದ ಹೊರಬರಬೇಕು ಎಂದು ಎಚ್ಚರಿಸಿದರು.
ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಬೇಕಾದರೆ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನೊಳಗೆ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಕರ್ನಾಟಕ ಪೊಲೀಸರನ್ನು ಅವಹೇಳನ ಮಾಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಸಹಿಸುವುದಿಲ್ಲ. ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿಸುವವರ ವಿರುದ್ಧ ಕಾನೂನು ತನ್ನ ಕೆಲಸವನ್ನು ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.