ಕೋಲಾರ ( www.vknews.in ): ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್. ರವಿಕುಮಾರ್ ಶನಿವಾರ ಅಧಿಕಾರ ಸ್ವೀಕರಿಸಿದ್ದು, ಜಿಲ್ಲೆಯ ಆಡಳಿತದಲ್ಲಿ ಹೊಸ ನಿರೀಕ್ಷೆಗೆ ನಾಂದಿ ಹಾಡಿದೆ. ಜಿಲ್ಲೆಯ ಮುದೇರಹಳ್ಳಿ ಗ್ರಾಮದವರಾದ ಅವರು, ನಾನು ಇದೇ ಜಿಲ್ಲೆಯ ಮಣ್ಣಿನ ಮಗ. ಜನ್ಮಭೂಮಿಯ ಋಣ ತೀರಿಸುವ ಅವಕಾಶ ಸಿಕ್ಕಿದೆ. ಜನರ ನಿರೀಕ್ಷೆಗೆ ತಕ್ಕಂತೆ ಪಾರದರ್ಶಕ ಹಾಗೂ ಜನಸ್ನೇಹಿ ಆಡಳಿತ ನೀಡುವುದು ನನ್ನ ಸಂಕಲ್ಪ ಎಂದು ಹೇಳಿದರು.
ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ರೈತರು, ಬಡವರು ಮತ್ತು ಜನಸಾಮಾನ್ಯರ ಹಿತವೇ ಮೊದಲ ಆದ್ಯತೆಯಾಗಲಿದೆ ಎಂದು ಸ್ಪಷ್ಟಪಡಿಸಿದರು. ಕೋಲಾರ ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಒತ್ತು ನೀಡಲಾಗುವುದು. ನೀರಿನ ಅಭಾವ, ಬೆಳೆ ಹಾನಿ, ಬೆಂಬಲ ಬೆಲೆ, ಭೂ ದಾಖಲೆ, ಕಂದಾಯ ಸೇರಿದಂತೆ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.
ಜನರ ಮನೆಬಾಗಿಲಿಗೆ ಆಡಳಿತ ಆಡಳಿತ ಕಚೇರಿಗಳಿಗೆ ಮಾತ್ರ ಸೀಮಿತವಾಗದೆ ಜನರ ಮನೆಬಾಗಿಲಿಗೆ ತಲುಪಬೇಕು. ಸರ್ಕಾರದ ಎಲ್ಲ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬ ಹಾಗೂ ಕಚೇರಿ ಅಲೆದಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಅಧಿಕಾರಿಗಳಿಗೆ ಖಡಕ್ ಸೂಚನೆ ಜನರ ಕೆಲಸಗಳನ್ನು ನಿರ್ಲಕ್ಷಿಸುವುದು, ವಿಳಂಬಗೊಳಿಸುವುದು ಅಥವಾ ಅಕ್ರಮಗಳಿಗೆ ಅವಕಾಶ ನೀಡುವುದನ್ನು ಸಹಿಸಲಾಗುವುದಿಲ್ಲ. ಪ್ರತಿಯೊಬ್ಬ ಅಧಿಕಾರಿಯೂ ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ಕರ್ತವ್ಯಲೋಪ ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಸಂದೇಶ ರವಾನಿಸಿದರು.
ಶಾಂತಿ, ಅಭಿವೃದ್ಧಿಗೆ ಆದ್ಯತೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಸಮನ್ವಯದಿಂದ ಕಾರ್ಯನಿರ್ವಹಿಸಲಿವೆ. ಶಾಂತಿ, ಸೌಹಾರ್ದ ಮತ್ತು ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಆಡಳಿತದ ಪ್ರಮುಖ ಗುರಿಯಾಗಲಿದೆ ಎಂದು ತಿಳಿಸಿದರು.
ಮಾಧ್ಯಮ ಸಹಕಾರ ಕೋರಿಕೆ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದೆ. ಸಾರ್ವಜನಿಕ ಸಮಸ್ಯೆಗಳನ್ನು ವಸ್ತುನಿಷ್ಠವಾಗಿ ಬೆಳಕಿಗೆ ತಂದು ಉತ್ತಮ ಆಡಳಿತಕ್ಕೆ ಕೈಜೋಡಿಸಬೇಕು ಎಂದು ಪತ್ರಕರ್ತರಿಗೆ ಮನವಿ ಮಾಡಿದರು. 19 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಎಂ.ಆರ್. ರವಿ ಅವರಿಂದ ಅಧಿಕಾರ ಸ್ವೀಕರಿಸಿರುವ ಎಂ.ಆರ್. ರವಿಕುಮಾರ್ ಅವರಿಂದ ರೈತಸ್ನೇಹಿ ಆಡಳಿತ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ಜಿಲ್ಲೆಯ ಜನರಲ್ಲಿ ಮೂಡಿದೆ. ಅಧಿಕಾರ ಸ್ವೀಕಾರದ ಬಳಿಕ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ನೂತನ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಶುಭಾಶಯ ಕೋರಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.