ಮಂಗಳೂರು (www.vknews.in): ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳು ಹಾಗೂ ತಾಲೂಕು ಆಡಳಿತಗಳು ಸಂಪೂರ್ಣ ಸನ್ನದ್ಧವಾಗಿರುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚನೆ ನೀಡಿದ್ದಾರೆ.
ಶನಿವಾರ ಅಧಿಕಾರಿಗಳೊಂದಿಗೆ ಆನ್ಲೈನ್ ಸಭೆ ನಡೆಸಿದ ಅವರು, ಮಳೆ ಸಂಬಂಧಿತ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ತಾಲೂಕು ಆಡಳಿತಗಳು 24 ಗಂಟೆಗಳ ಕಾಲ ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕು. ನಿಯಂತ್ರಣ ಕೊಠಡಿಗಳು (ಕಂಟ್ರೋಲ್ ರೂಂ) ನಿರಂತರವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಗುಡ್ಡ ಕುಸಿತ ಹಾಗೂ ಮಣ್ಣು ಜರಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಗುರುತಿಸಿರುವ ಅಪಾಯದ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ ಅವರು, ಅಗತ್ಯವಿದ್ದರೆ ಅಪಾಯದ ಮನೆಗಳಲ್ಲಿ ವಾಸಿಸುವವರನ್ನು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಹೇಳಿದರು.
ಮಣ್ಣು ಜರಿಯುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮರಳು ಚೀಲಗಳನ್ನು ಅಳವಡಿಸಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಬೇಕು. ಅಗತ್ಯವಿದ್ದಲ್ಲಿ ಖಾಸಗಿ ಜಮೀನುಗಳಲ್ಲಿಯೂ ತಾತ್ಕಾಲಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪ್ರಾಕೃತಿಕ ವಿಕೋಪದಿಂದ ಮೃತಪಟ್ಟವರ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರದ ಚೆಕ್ ವಿತರಿಸುವಂತೆ ಸೂಚಿಸಿದ ಅವರು, ಸ್ಥಳಾಂತರಗೊಂಡ ಕುಟುಂಬಗಳಿಗೆ ಅಗತ್ಯ ಆಹಾರ, ವಸತಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಗ್ನಿಶಾಮಕ ದಳ, ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ತಂಡಗಳು ಸದಾ ಸನ್ನದ್ಧವಾಗಿರಬೇಕು. ಚಾರ್ಮಾಡಿ, ಸಂಪಾಜೆ ಹಾಗೂ ಶಿರಾಡಿ ಸೇರಿದಂತೆ ಪ್ರಮುಖ ಘಾಟ್ ರಸ್ತೆಗಳಲ್ಲಿ ಭೂಕುಸಿತ ಅಥವಾ ಗುಡ್ಡ ಜರಿತ ಸಂಭವಿಸಿದರೆ ತಕ್ಷಣ ತೆರವು ಕಾರ್ಯಾಚರಣೆ ನಡೆಸಲು ಅಗತ್ಯ ಯಂತ್ರೋಪಕರಣಗಳು ಮತ್ತು ಸಿಬ್ಬಂದಿಯನ್ನು ಸಜ್ಜುಗೊಳಿಸಬೇಕು ಎಂದರು.
ಈವರೆಗೆ ಜಿಲ್ಲೆಯಲ್ಲಿ ಹೆದ್ದಾರಿ ಬಂದ್ ಅಥವಾ ಸಂಚಾರ ಸ್ಥಗಿತದಂತಹ ಯಾವುದೇ ಘಟನೆ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.