ಮೂಡುಬಿದಿರೆ (www.vknews.in): ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ನಾಣಿಲ್ನಲ್ಲಿ ಯುವಕನೊಬ್ಬ ತನ್ನ ಸಹೋದರಿಗೆ ವಿಡಿಯೊ ಕರೆ ಮಾಡಿ ಮಾತನಾಡುತ್ತಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕಾಜೂರು ನಿವಾಸಿ ಸಯ್ಯದ್ ಅನ್ವರ್ (25) ಎಂದು ಗುರುತಿಸಲಾಗಿದೆ.
ಸಯ್ಯದ್ ಅನ್ವರ್ ಅವರು ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಎಂಬುವವರ ಬಾಡಿಗೆ ಮನೆಯಲ್ಲಿ ಪತ್ನಿ ಮತ್ತು ಎರಡು ವರ್ಷದ ಮಗುವಿನೊಂದಿಗೆ ವಾಸಿಸುತ್ತಿದ್ದರು. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿಯೂ ದೂರು ದಾಖಲಾಗಿತ್ತು ಎಂದು ತಿಳಿದುಬಂದಿದೆ.
ಮೀನಿನ ಟೆಂಪೊ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅನ್ವರ್, ಕಳೆದ ಕೆಲವು ದಿನಗಳಿಂದ ಕೆಲಸವಿಲ್ಲದೆ ಮನೆಯಲ್ಲಿದ್ದರು. ಇತ್ತೀಚೆಗೆ ಬೆಂಗಳೂರಿಗೆ ತೆರಳಿ ಮರಳಿದ್ದ ಅವರು, ಗುರುವಾರ ಮತ್ತೊಮ್ಮೆ ಪತ್ನಿಯೊಂದಿಗೆ ಜಗಳವಾದ ಬಳಿಕ ಪತ್ನಿ ಮಗುವಿನೊಂದಿಗೆ ತವರು ಮನೆಗೆ ತೆರಳಿದ್ದರು ಎನ್ನಲಾಗಿದೆ.
ಮನನೊಂದಿದ್ದ ಅನ್ವರ್ ತನ್ನ ಸಹೋದರಿಗೆ ವಿಡಿಯೊ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದರು ಎಂದು ಹೇಳಲಾಗಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಬಾಡಿಗೆ ಮನೆಯವರಿಗೆ ಮಾಹಿತಿ ನೀಡಿದ್ದರು. ಅವರು ಸ್ಥಳಕ್ಕೆ ಧಾವಿಸಿದಾಗ ಅನ್ವರ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಘಟನೆ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಆತ್ಮಹತ್ಯೆಯ ಆಲೋಚನೆಗಳು ಅಥವಾ ತೀವ್ರ ಮಾನಸಿಕ ಸಂಕಷ್ಟವನ್ನು ಅನುಭವಿಸುತ್ತಿದ್ದರೆ, ತಕ್ಷಣ ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ. ಸಮಯೋಚಿತ ನೆರವು ಜೀವ ಉಳಿಸಬಹುದು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.