ಬೆಂಗಳೂರು (www.vknews.in): ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (CPC) ನೇಮಕಾತಿ ಪರೀಕ್ಷೆಯಲ್ಲಿ ಧಾರ್ಮಿಕ ಉಡುಪು ಅಥವಾ ಧಾರ್ಮಿಕ ಆಭರಣ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಉಡುಪು ಅಥವಾ ಆಭರಣ ಧರಿಸಿ ಪರೀಕ್ಷೆಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆದರೆ, ಅಂತಹ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ 2 ಗಂಟೆ 30 ನಿಮಿಷಗಳ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಕಡ್ಡಾಯ ಭದ್ರತಾ ತಪಾಸಣೆಗೆ ಒಳಗಾಗಬೇಕು ಎಂದು ತಿಳಿಸಿದರು.
ತಪಾಸಣೆ ಪೂರ್ಣಗೊಂಡ ಬಳಿಕವೇ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು. ಪರೀಕ್ಷೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪಾಲಿಸಬೇಕಾದ ಉಡುಪು ನಿಯಮ, ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಕುರಿತು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಅಭ್ಯರ್ಥಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದ ಅವರು, ಮೊಬೈಲ್ ಫೋನ್, ಕೈಗಡಿಯಾರ, ಎಲೆಕ್ಟ್ರಾನಿಕ್ ಸಾಧನಗಳು, ಪುಸ್ತಕಗಳು, ಬ್ಯಾಗ್ಗಳು ಸೇರಿದಂತೆ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಾರದು ಎಂದು ಎಚ್ಚರಿಕೆ ನೀಡಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.