ಮಂಗಳೂರು (www.vknews.in): ಚಿಕಿತ್ಸೆಗೆ ದಾಖಲಾದ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂದು ಆರೋಪಿಸಿ, ಮಹಿಳೆಯ ಪತಿ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಶಕ್ತಿನಗರ ನಿವಾಸಿ ಸುಂದರ ಪೂಜಾರಿ ಅವರ ಪತ್ನಿ ಜಾನಕಿ (53) ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಹೃದ್ರೋಗ ತಜ್ಞರು ಲಭ್ಯವಿಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗೆ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು.
ವೆನ್ಲಾಕ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರು ಪರೀಕ್ಷಿಸಿದ ಬಳಿಕ ಜಾನಕಿ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ದೂರಿನ ಪ್ರಕಾರ, ಆಸ್ಪತ್ರೆಗೆ ದಾಖಲಿಸುವ ವೇಳೆ ಜಾನಕಿ ಅವರ ಕುತ್ತಿಗೆಯಲ್ಲಿ ಸುಮಾರು 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಇತ್ತು. ಆದರೆ ಬಳಿಕ ಮೃತದೇಹವನ್ನು ಪರಿಶೀಲಿಸಿದಾಗ ಕರಿಮಣಿ ಸರ ಕಾಣಿಸದಿರುವುದು ಕುಟುಂಬದವರ ಗಮನಕ್ಕೆ ಬಂದಿದೆ.
ಈ ಹಿನ್ನೆಲೆಯಲ್ಲಿ ಕರಿಮಣಿ ಸರವನ್ನು ಯಾರು ತೆಗೆದುಕೊಂಡಿದ್ದಾರೆ ಎಂಬುದನ್ನು ಪತ್ತೆಹಚ್ಚಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಂದರ ಪೂಜಾರಿ ಅವರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕರಿಮಣಿ ಸರ ನಾಪತ್ತೆಯ ಕುರಿತು ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.