ಮೈಸೂರು (www.vknews.in): ಕಬಿನಿ ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯವಾಗಿದ್ದು, ನೀರು ಬಿಡುಗಡೆ ತಡೆಯುವ ಉದ್ದೇಶದಿಂದ ಯಾರೂ ನದಿಗೆ ಇಳಿಯಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಬಿನಿ ಜಲಾಶಯ ತುಂಬುತ್ತಿರುವುದರಿಂದ ನೀರನ್ನು ಹೊರಬಿಡಲೇಬೇಕು. ಅಣೆಕಟ್ಟು ತುಂಬಿದ ಬಳಿಕ ನೀರನ್ನು ತಡೆಹಿಡಿಯಲು ಸಾಧ್ಯವಿಲ್ಲ. ನೀರು ಬಿಡುವುದಿಲ್ಲ ಎಂದು ನದಿಗೆ ಇಳಿದರೆ ನೀರಿನ ರಭಸಕ್ಕೆ ಕೊಚ್ಚಿಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ, ಜಲಾಶಯದ ನೀರಿನ ಮಟ್ಟದ ಕುರಿತು ಅಧಿಕಾರಿಗಳು ಪ್ರತಿ ಗಂಟೆಯೂ ಮಾಹಿತಿ ನೀಡುತ್ತಿದ್ದಾರೆ ಎಂದು ತಿಳಿಸಿ, “ಪ್ರಕೃತಿ ಯಾರ ಸ್ವತ್ತೂ ಅಲ್ಲ. ಪ್ರಕೃತಿಯ ನಿಯಮದಂತೆ ನಾವು ನಡೆದುಕೊಳ್ಳಬೇಕಾಗುತ್ತದೆ. ಸರ್ಕಾರ ನೀರು ಬಿಡುವುದಿಲ್ಲ ಎಂದು ತೀರ್ಮಾನಿಸಿದರೂ, ಅಣೆಕಟ್ಟು ಭರ್ತಿಯಾದಾಗ ನೀರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು.
ಕಬಿನಿ ನೀರು ತಮಿಳುನಾಡಿಗೆ ಹರಿಸಬಾರದು ಎಂದು ಕೆಲ ಸಂಘಟನೆಗಳು ಪ್ರತಿಭಟನೆ ಹಾಗೂ ಬಂದ್ಗೆ ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಪ್ರತಿಯೊಂದು ಹೋರಾಟಕ್ಕೂ ಸೂಕ್ತ ಹಿನ್ನೆಲೆ ಇರಬೇಕು. ಈಗಿನ ಪರಿಸ್ಥಿತಿಯಲ್ಲಿ ಕಾನೂನು ಸುವ್ಯವಸ್ಥೆ ಅಥವಾ ಜನಜೀವನಕ್ಕೆ ತೊಂದರೆ ಉಂಟುಮಾಡುವ ರೀತಿಯ ಪ್ರತಿಭಟನೆ ನಡೆಸಬಾರದು” ಎಂದು ಹೇಳಿದರು.
ಇದೇ ವೇಳೆ, “ಕರ್ನಾಟಕದಲ್ಲಿ ಎಲ್ಲ ವರ್ಗದ ಜನರು ನೆಲೆಸಿದ್ದಾರೆ. ತಮಿಳುನಾಡು ಸೇರಿದಂತೆ ನಾವೆಲ್ಲರೂ ಒಂದೇ ದೇಶದ ಪ್ರಜೆಗಳು. ಶಾಂತಿ ಮತ್ತು ಸೌಹಾರ್ದ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.