ನವದೆಹಲಿ (www.vknews.in): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆಯಾಚಿಸಿರುವ 15 ವರ್ಷದ ಬಾಲಕಿಯ ತಾಯಿ, ತಮ್ಮ ಮಗಳ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ. ಜೊತೆಗೆ, ಕುಟುಂಬಕ್ಕೆ ನಿರಂತರ ಬೆದರಿಕೆಗಳು ಬರುತ್ತಿದ್ದು, ಭದ್ರತೆ ಒದಗಿಸುವಂತೆ ಸರ್ಕಾರವನ್ನು ಕೋರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಬಳಿಕ ತಮ್ಮ ಊರಿಗೆ ಮರಳಲು ಸಾಧ್ಯವಾಗಿಲ್ಲ. ಸಾಮಾಜಿಕ ಜಾಲತಾಣಗಳ ಮೂಲಕ ಮಗಳಿಗೆ ಅತ್ಯಾಚಾರ ಹಾಗೂ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ “ದಾರಿತಪ್ಪಿದ ಮಕ್ಕಳನ್ನು ಕ್ಷಮಿಸಿ, ಅವರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು” ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಬಾಲಕಿಯ ತಾಯಿ ಈ ಭಾವನಾತ್ಮಕ ಮನವಿ ಮಾಡಿದ್ದಾರೆ. ತಮ್ಮ ಮಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿದ ಅವರು, “ನನ್ನ ಮಗಳು ತಪ್ಪು ಮಾಡಿದ್ದಾಳೆ. ಆದರೆ ಅದಕ್ಕಾಗಿ ಆಕೆಗೆ ಅತ್ಯಾಚಾರ ಹಾಗೂ ಕೊಲೆ ಬೆದರಿಕೆ ಹಾಕುವುದು ಸರಿಯಲ್ಲ” ಎಂದು ಹೇಳಿದ್ದಾರೆ.
ಇದೇ ವೇಳೆ, ತಂದೆಯನ್ನು ಕಳೆದುಕೊಂಡಿರುವ ತಮ್ಮ ಮಗಳನ್ನು “ದತ್ತು ತೆಗೆದುಕೊಳ್ಳಿ” ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ ಅವರು, ಆಕೆಗೆ ತಂದೆಯ ಮನೆಯಲ್ಲಿನ ಹಕ್ಕು ಸಿಗುವಂತೆ ನೋಡಿಕೊಳ್ಳಬೇಕೆಂದು ಕೋರಿದ್ದಾರೆ. “ನನ್ನ ಕುಟುಂಬಕ್ಕೆ ಏನಾದರೂ ಆದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಯಾರೂ ಹೊಣೆ ಮಾಡಬಾರದು. ಸಮಾಜಘಾತುಕ ಶಕ್ತಿಗಳು ತಪ್ಪು ಸಂದೇಶ ಹರಡಲು ಪ್ರಯತ್ನಿಸಬಹುದು. ಆದ್ದರಿಂದ ನಮ್ಮ ಕುಟುಂಬಕ್ಕೆ ತಕ್ಷಣ ಭದ್ರತೆ ಒದಗಿಸಬೇಕು” ಎಂದು ಅವರು ಮನವಿ ಮಾಡಿದ್ದಾರೆ.
ದೆಹಲಿ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಕಿ, ಬಳಿಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಾನು ಇತರರ ಪ್ರಭಾವಕ್ಕೆ ಒಳಗಾಗಿದ್ದೆ ಹಾಗೂ ಇದು ತನ್ನ ಮೊದಲ ಮತ್ತು ಕೊನೆಯ ತಪ್ಪು ಎಂದು ಹೇಳಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ನ್ನು ಹಿಂಪಡೆಯುವಂತೆ ಕುಟುಂಬ ಇದೀಗ ಸರ್ಕಾರವನ್ನು ಒತ್ತಾಯಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.