ಉಡುಪಿ (www.vknews.in): 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಮದ್ಯ ಪೂರೈಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್ಗಳ ಮೇಲೆ ವಿಶೇಷ ದಾಳಿ ನಡೆಸಿದ್ದು, ಮದ್ಯ ಸೇವಿಸುತ್ತಿದ್ದ 87 ಯುವಕ-ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ಪತ್ತೆಯಾಗಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಆರು ತಂಡಗಳು ಕಾರ್ಯಾಚರಣೆ ನಡೆಸಿದವು. ದಾಳಿಯ ವೇಳೆ 64 ಯುವಕರು, 23 ಯುವತಿಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕ ವಿವಿಧ ಬಾರ್ ಮತ್ತು ಪಬ್ಗಳಲ್ಲಿ ಮದ್ಯ ಸೇವಿಸುತ್ತಿರುವುದು ಬೆಳಕಿಗೆ ಬಂದಿದೆ.
ಕಾರ್ಯಾಚರಣೆಯಲ್ಲಿ ಎಕ್ಸ್ಟಸಿ 7ನೇ ಹೆವೆನ್ ಪಬ್, ಸಾಯಿ ಸಾಗರ್ ಬಾರ್ ಆ್ಯಂಡ್ ರೆಸ್ಟೋರೆಂಟ್, ಡೌನ್ ದಿ ರೋಡ್ ಬಾರ್ ಆ್ಯಂಡ್ ರೆಸ್ಟೋರೆಂಟ್, ಡೆಕ್ಸ್ಟರ್ ಬಾರ್ ಆ್ಯಂಡ್ ರೆಸ್ಟೋರೆಂಟ್, ಡೀ ಟೀ ಬಾರ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ಜನನಿ (ಎಡ್ಜ್) ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ ಒಟ್ಟು ಆರು ಬಾರ್ ಮತ್ತು ಪಬ್ಗಳನ್ನು ಪರಿಶೀಲಿಸಲಾಯಿತು.
ಕರ್ನಾಟಕ ಅಬಕಾರಿ ಪರವಾನಗಿ ನಿಯಮಗಳು, ಕರ್ನಾಟಕ ಅಬಕಾರಿ ಕಾಯ್ದೆ ಹಾಗೂ COTPA ಕಾಯ್ದೆಯ ಉಲ್ಲಂಘನೆ ಆರೋಪದಡಿ ಸಂಬಂಧಿತ ಬಾರ್ ಮತ್ತು ಪಬ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಆರು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.
ಭವಿಷ್ಯದಲ್ಲಿಯೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಪೂರೈಕೆ, ಹುಕ್ಕಾ ಸೇವನೆಗೆ ಅವಕಾಶ ಅಥವಾ ಕಾನೂನು ಉಲ್ಲಂಘನೆ ಕಂಡುಬಂದರೆ ಇಂತಹ ವಿಶೇಷ ದಾಳಿ ಮುಂದುವರಿಯಲಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.