ಲಕ್ನೋ (www.vknews.in): ಪತಿಯಿಂದ ವಿಚ್ಛೇದನ ಪಡೆದ ಬಳಿಕ ಖಿನ್ನತೆ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಮನೋವೈದ್ಯೆಯೊಬ್ಬರು ಅಪಾರ್ಟ್ಮೆಂಟ್ನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತರನ್ನು 40 ವರ್ಷದ ಡಾ. ಹೆಮಿಕಾ ಅಗರ್ವಾಲ್ ಎಂದು ಗುರುತಿಸಲಾಗಿದೆ. ಭಾನುವಾರ ರಾಜ್ ನಗರ ಎಕ್ಸ್ಟೆನ್ಷನ್ನಲ್ಲಿರುವ ಆಫೀಸರ್ಸ್ ಸಿಟಿ-2 ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ.
ಐದನೇ ಮಹಡಿಯಿಂದ ಹಾರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಾರು ಒಂದೂವರೆ ವರ್ಷದ ಹಿಂದೆ ವಿಚ್ಛೇದನವಾಗಿದ್ದ ಬಳಿಕ ಡಾ. ಹೆಮಿಕಾ ತೀವ್ರ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ತಂದೆ ಹಾಗೂ ಖ್ಯಾತ ಮನೋವೈದ್ಯ ಡಾ. ಆರ್. ಚಂದ್ರ ಕೂಡ ಇದೇ ವಿಷಯವನ್ನು ದೃಢಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕುಟುಂಬ ಸದಸ್ಯರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದುವರೆಗೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ತಿಳಿಸಿರುವ ಪೊಲೀಸರು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸೂಚನೆ: ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಖಿನ್ನತೆ ಅಥವಾ ಆತ್ಮಹತ್ಯೆಯ ಆಲೋಚನೆಗಳಿಂದ ಬಳಲುತ್ತಿದ್ದರೆ, ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ನೆರವು ಪಡೆಯುವುದು ಅತ್ಯಂತ ಮುಖ್ಯ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.