ಬೆಂಗಳೂರು (www.vknews.in): ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜೀನಾಮೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಶಾಸಕರ ವಿರುದ್ಧ ಹೈಕಮಾಂಡ್ ಕಠಿಣ ನಿಲುವು ತಾಳಿದೆ ಎನ್ನಲಾಗಿದೆ. ರಾಜೀನಾಮೆ ಸಲ್ಲಿಸಿದರೆ ಅದನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
20 ನೂತನ ಸಚಿವರ ಪಟ್ಟಿಗೆ ಹೈಕಮಾಂಡ್ ಅನುಮೋದನೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ವಂಚಿತರಾದ ಕೆಲ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಮೂಲಗಳ ಪ್ರಕಾರ, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ವರಿಷ್ಠರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ವಿವರಣೆ ಪಡೆದು, ಸಚಿವ ಸ್ಥಾನ ಸಿಗದವರಿಗೆ ನಿಗಮ-ಮಂಡಳಿಗಳಲ್ಲಿ ಅವಕಾಶ ನೀಡಬಹುದು. ಅದಕ್ಕೂ ಒಪ್ಪದಿದ್ದರೆ ರಾಜೀನಾಮೆ ಅಂಗೀಕರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಈಗಾಗಲೇ ವಿಧಾನಸಭೆ ಸ್ಪೀಕರ್ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕೂಡ ಸಚಿವ ಸ್ಥಾನ ಸಿಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಕ್ಷೇತ್ರದ ಜನರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದೀಗ ಹೈಕಮಾಂಡ್ನ ಈ ಕಠಿಣ ನಿಲುವು ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.