ಬೆಂಗಳೂರು (www.vknews.in): ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಸಂಬಂಧಿಸಿದ ಬಾಕಿ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಉಚಿತ ಬಸ್ ಪಾಸ್ ಸಮಿತಿಯ ಸಭೆಯನ್ನು ಆಗಸ್ಟ್ 6ರಂದು ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜುಲೈ 30ರಂದು ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಶೀಘ್ರ ಜಾರಿಗೆ ತರಬೇಕು ಹಾಗೂ ಬಸ್ ಪಾಸ್ ಸಮಿತಿಯ ಸಭೆಯನ್ನು ತಕ್ಷಣ ಕರೆಯಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದರು. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಆಗಸ್ಟ್ 6ರಂದು ಸಮಿತಿ ಸಭೆ ನಡೆಸಲು ನಿರ್ಧರಿಸಿರುವುದು ಯೋಜನೆ ಜಾರಿಗೆ ವೇಗ ಸಿಗುವ ನಿರೀಕ್ಷೆ ಮೂಡಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಗ್ರಾಮೀಣ ಪತ್ರಕರ್ತರು ತಮ್ಮ ವೃತ್ತಿ ನಿರ್ವಹಣೆಯಲ್ಲಿ ಎದುರಿಸುತ್ತಿರುವ ಸಂಚಾರದ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಉಚಿತ ಬಸ್ ಪಾಸ್ ಯೋಜನೆ ಮಹತ್ವದ ನೆರವಾಗಲಿದೆ ಎಂದು ತಿಳಿಸಿದ್ದಾರೆ. ಸಮಿತಿ ಸಭೆಯಲ್ಲಿ ಅಗತ್ಯ ನಿರ್ಧಾರಗಳನ್ನು ಕೈಗೊಂಡು, ಅರ್ಹ ಪತ್ರಕರ್ತರಿಗೆ ಯಾವುದೇ ವಿಳಂಬವಿಲ್ಲದೆ ಬಸ್ ಪಾಸ್ ವಿತರಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಪತ್ರಕರ್ತರ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಸ್ಪಂದಿಸಿರುವುದನ್ನು ಕೆಯುಡಬ್ಲ್ಯೂಜೆ ಸ್ವಾಗತಿಸಿದ್ದು, ಗ್ರಾಮೀಣ ಪತ್ರಕರ್ತರ ಬಹುಕಾಲದ ಬೇಡಿಕೆಯಾಗಿರುವ ಉಚಿತ ಬಸ್ ಪಾಸ್ ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.