ಕೋಲಾರ (www.vknews.in): ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ತುರ್ತು ಸಂದರ್ಭದಲ್ಲಿ ನಿಯಮಾವಳಿಗಳಿಗಿಂತ ಜನರ ದಾಹ ತೀರಿಸುವುದೇ ಮುಖ್ಯ. ಕೂಡಲೇ ಕ್ರಿಯಾ ಯೋಜನೆ ರೂಪಿಸಿ ಅಗತ್ಯವಿರುವ ಗ್ರಾಮಗಳಿಗೆ ಸಮರ್ಪಕವಾಗಿ ನೀರು ಪೂರೈಸಬೇಕು ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರು, ಕೃಷಿ, ಎತ್ತಿನಹೊಳೆ ಯೋಜನೆ ಸೇರಿದಂತೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಸುದೀರ್ಘವಾಗಿ ಪರಿಶೀಲನೆ ನಡೆಸಿದರು.
130 ಗ್ರಾಮಗಳಲ್ಲಿ ತೀವ್ರ ಸಮಸ್ಯೆ ಜಿಲ್ಲೆಯ 154 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 1,523 ಗ್ರಾಮಗಳು ಹಾಗೂ 1,953 ಜನವಸತಿ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಪರಿಸ್ಥಿತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ನಿಯಮದಂತೆ ಪ್ರತಿಯೊಬ್ಬರಿಗೆ ಕನಿಷ್ಠ 55 ಎಲ್ಪಿಸಿಡಿ ನೀರು ಪೂರೈಸಬೇಕಾಗಿದೆ. ಆದರೆ ಜಿಲ್ಲೆಯಲ್ಲಿ ಶೇ.47ರಷ್ಟು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಸುಮಾರು 130 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಪರಿಸ್ಥಿತಿ ನಿಭಾಯಿಸಲು ಸರ್ಕಾರದಿಂದ ಟಾಸ್ಕ್ಫೋರ್ಸ್ಗೆ ₹4 ಕೋಟಿ ಅನುದಾನ ಬಿಡುಗಡೆಯಾಗಿದೆ.
ತುರ್ತು ಅಗತ್ಯವಿರುವ ಪ್ರದೇಶಗಳಲ್ಲಿ ಟ್ಯಾಂಕರ್ಗಳ ಮೂಲಕ ನೀರು ಪೂರೈಸುವುದರ ಜತೆಗೆ ಖಾಸಗಿ ಕೊಳವೆಬಾವಿಗಳನ್ನೂ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸಚಿವರು ಸೂಚಿಸಿದರು. ಜನಪ್ರತಿನಿಧಿಗಳು ನೀಡುವ ದೂರುಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಸಮಸ್ಯೆ ಉಲ್ಬಣಗೊಂಡ ನಂತರ ಕ್ರಮ ಕೈಗೊಳ್ಳುವ ಬದಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
₹30–40 ಕೋಟಿ ಬಿಲ್ ಬಾಕಿ ಹಳೆಯ ಕಾಮಗಾರಿಗಳ ಬಿಲ್ ಪಾವತಿಯಲ್ಲಿ ವಿಳಂಬವಾಗುತ್ತಿರುವ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಕೊಳವೆಬಾವಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಸುಮಾರು ₹30ರಿಂದ ₹40 ಕೋಟಿ ಬಿಲ್ ಬಾಕಿ ಇರುವುದರಿಂದ ಹೊಸ ಕೊಳವೆಬಾವಿ ಕೊರೆಯಲು ಅವರು ಹಿಂದೇಟು ಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಈ ಹಿನ್ನೆಲೆಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಸೇರಿದಂತೆ ಲಭ್ಯವಿರುವ ಅನುದಾನಗಳನ್ನು ಸಮನ್ವಯಗೊಳಿಸಿ ಬಾಕಿ ಮೊತ್ತ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಒಟ್ಟು 1,813 ಗ್ರಾಮಗಳ ಪೈಕಿ 623 ಗ್ರಾಮಗಳಲ್ಲಿ ಹಸ್ತಾಂತರ ಪ್ರಕ್ರಿಯೆ ಆರಂಭವಾಗಿದೆ. ಹೊಸ ಕೊಳವೆಬಾವಿಗಳಿಗೆ ಪಂಪ್ಮೋಟಾರ್ ಅಳವಡಿಸಿ, ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಬೆಸ್ಕಾಂ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸೂಚನೆ ನೀಡಲಾಯಿತು.
ಆರ್ಒ ಘಟಕಗಳ ನಿರ್ವಹಣೆಗೆ ಒತ್ತು ಜಿಲ್ಲೆಯಲ್ಲಿ ಆರ್ಒ ಘಟಕಗಳ ನಿರ್ವಹಣೆಗೆ ತಿಂಗಳಿಗೆ ಸುಮಾರು ₹35 ಲಕ್ಷ ವೆಚ್ಚವಾಗುತ್ತಿದೆ. ಕೇವಲ ಘಟಕಗಳನ್ನು ನಿರ್ಮಿಸುವುದಕ್ಕೆ ಸೀಮಿತವಾಗದೆ, ಅವುಗಳ ನಿರಂತರ ನಿರ್ವಹಣೆಯ ಜವಾಬ್ದಾರಿಯನ್ನೂ ಸಂಬಂಧಪಟ್ಟ ಇಲಾಖೆಗಳು ವಹಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಮಾರ್ಕಂಡೇಯ ಯೋಜನೆ :186 ಗ್ರಾಮಗಳಿಗೆ ಬದಲು 26 ಗ್ರಾಮಗಳಿಗೆ ನೀರು ಬೃಹತ್ ಕುಡಿಯುವ ನೀರಿನ ಯೋಜನೆಗಳ ಕುರಿತು ಜನಪ್ರತಿನಿಧಿಗಳು ಸಭೆಯ ಗಮನ ಸೆಳೆದರು. ₹45 ಕೋಟಿ ವೆಚ್ಚದ ಮಾರ್ಕಂಡೇಯ ಜಲಾಶಯ ಯೋಜನೆಯಡಿ ಮಾಲೂರು ಮತ್ತು ಬಂಗಾರಪೇಟೆ ತಾಲೂಕಿನ 186 ಗ್ರಾಮಗಳಿಗೆ ನೀರು ಪೂರೈಸುವ ಉದ್ದೇಶವಿದ್ದರೂ, ಪಂಪ್ ಹಾಗೂ ಟ್ರಾನ್ಸ್ಫಾರ್ಮರ್ ಸುಟ್ಟುಹೋಗಿರುವ ಕಾರಣ ಸದ್ಯ ಕೇವಲ 26 ಗ್ರಾಮಗಳಿಗೆ ಮಾತ್ರ ನೀರು ಪೂರೈಕೆಯಾಗುತ್ತಿದೆ ಎಂದು ತಿಳಿಸಿದರು. ಸುಟ್ಟುಹೋಗಿರುವ ಪಂಪ್ ಮತ್ತು ಟ್ರಾನ್ಸ್ಫಾರ್ಮರ್ಗಳನ್ನು ತ್ವರಿತವಾಗಿ ದುರಸ್ತಿ ಮಾಡಿ ಎಲ್ಲ ಗ್ರಾಮಗಳಿಗೂ ನೀರು ಪೂರೈಸುವಂತೆ ಒತ್ತಾಯಿಸಲಾಯಿತು.
ಯರಗೋಳಿನಲ್ಲಿ 140 ಎಂಸಿಎಫ್ಟಿ ನೀರು ಒಟ್ಟು 500 ಎಂಸಿಎಫ್ಟಿ ಸಾಮರ್ಥ್ಯದ ಯರಗೋಳು ಜಲಾಶಯದಲ್ಲಿ ಸದ್ಯ 140 ಎಂಸಿಎಫ್ಟಿ ನೀರು ಲಭ್ಯವಿದ್ದು, ಇದು ಮುಂದಿನ ಐದು ತಿಂಗಳಿಗೆ ಮಾತ್ರ ಸಾಕಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಹೀಗಾಗಿ ಬಂಗಾರಪೇಟೆ, ಕೋಲಾರ ಮತ್ತು ಮಾಲೂರು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಈಗಿನಿಂದಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಸೂಚಿಸಿದರು. ಕೆಜಿಎಫ್ ಶಾಸಕಿ ಡಾ. ರೂಪಕಲಾ ಶಶಿಧರ್ ಮಾತನಾಡಿ, ಯರಗೋಳು ಹಾಗೂ ಮಾರ್ಕಂಡೇಯ ಜಲಾಶಯಗಳಿಂದ ಸಮರ್ಪಕವಾಗಿ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಕೆಜಿಎಫ್ ನಗರದಲ್ಲಿ 15 ಬಾಡಿಗೆ ನೀರಿನ ಟ್ಯಾಂಕರ್ಗಳ ಮೂಲಕ ಜನರಿಗೆ ನೀರು ಪೂರೈಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಭೆಯ ಗಮನಕ್ಕೆ ತಂದರು.
ಎರಡು ತಿಂಗಳಲ್ಲಿ ಎತ್ತಿನಹೊಳೆ ನೀರು ಎತ್ತಿನಹೊಳೆ ಯೋಜನೆಯ ಪ್ರಗತಿ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು. 5.8 ಕಿ.ಮೀ. ಕಾಮಗಾರಿಗಾಗಿ ಜಿಲ್ಲಾಧಿಕಾರಿ ಖಾತೆಯಲ್ಲಿ ₹29 ಕೋಟಿ ಮೀಸಲಿಡಲಾಗಿದೆ. ಗುಬ್ಬಿ ಬಳಿಯ 1.8 ಎಕರೆ ಅರಣ್ಯ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರ ತೆರವು ಕಾರ್ಯವೂ ಮುಗಿದಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಭೈರಗೊಂಡ್ಲು ವರೆಗೆ ನೀರು ಹರಿಸುವ ಭರವಸೆ ನೀಡಿದರು.
ರಾಗಿ ಬಿತ್ತನೆ ಕೇವಲ ಶೇ.14 ಕೃಷಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಕೃಷಿ ಪರಿಸ್ಥಿತಿ ಕುರಿತು ಮಾಹಿತಿ ನೀಡಿದರು. ಸಾಮಾನ್ಯವಾಗಿ ಜುಲೈ ವೇಳೆಗೆ ಶೇ.90ರಷ್ಟು ಬಿತ್ತನೆ ಪೂರ್ಣಗೊಳ್ಳಬೇಕಿತ್ತು. ಆದರೆ ಮಳೆ ಕೊರತೆಯಿಂದ ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಕೇವಲ ಶೇ.14ರಷ್ಟು ಬಿತ್ತನೆಯಾಗಿದೆ ಎಂದು ತಿಳಿಸಿದರು. ಆಗಸ್ಟ್ ಅಂತ್ಯದವರೆಗೂ ಬಿತ್ತನೆಗೆ ಅವಕಾಶವಿದ್ದು, ರೈತರಿಗೆ ಅಗತ್ಯವಿರುವ ರಾಗಿ ಬಿತ್ತನೆ ಬೀಜ, ಡಿಎಪಿ, ಕಾಂಪ್ಲೆಕ್ಸ್ ಹಾಗೂ ಯೂರಿಯಾ ರಸಗೊಬ್ಬರಗಳ ಕೊರತೆಯಿಲ್ಲ. ಅಗತ್ಯ ಪ್ರಮಾಣದ ದಾಸ್ತಾನು ಲಭ್ಯವಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.
ಅಕ್ರಮ ಮದ್ಯ, ಗಾಂಜಾ ಮಾರಾಟಕ್ಕೆ ಕಡಿವಾಣ ಗ್ರಾಮೀಣ ಭಾಗದ ಕೆಲವು ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟವಾಗುತ್ತಿರುವುದರಿಂದ ಯುವಕರು ಮತ್ತು ವಿದ್ಯಾರ್ಥಿಗಳು ದಾರಿತಪ್ಪುತ್ತಿರುವ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತವಾಯಿತು. ಅಕ್ರಮ ಚಟುವಟಿಕೆಗಳ ವಿರುದ್ಧ ಕೇವಲ ದಂಡ ವಿಧಿಸಿ ಕೈಬಿಡದೆ, ಪ್ರಕರಣ ದಾಖಲಿಸಿ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸಚಿವರು ಸೂಚಿಸಿದರು. ಇದೇ ವೇಳೆ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಕೊರತೆಯಿರುವುದನ್ನೂ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ರಸ್ತೆ ಮತ್ತು ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಮನಬಂದಂತೆ ಮರಗಳನ್ನು ಕಡಿಯುವುದನ್ನು ತಡೆಯಬೇಕು. ಕಾಮಗಾರಿಗೆ ಅನಿವಾರ್ಯವಾಗಿರುವ ಮರಗಳನ್ನು ಮಾತ್ರ ತೆರವುಗೊಳಿಸಬೇಕು ಎಂದು ಸೂಚಿಸಲಾಯಿತು.
ಮೃತರ ಖಾತೆಗೂ ಗೃಹಲಕ್ಷ್ಮಿ ಹಣ ಸಭೆಯ ಕೊನೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೂ ಜಮೆಯಾಗುತ್ತಿರುವ ಪ್ರಕರಣ ಕುರಿತು ಗಂಭೀರ ಚರ್ಚೆ ನಡೆಯಿತು. ಮೃತ ಫಲಾನುಭವಿಗಳ ಖಾತೆಗೆ ಜಮೆಯಾಗಿರುವ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಲೋಪಗಳು ಮರುಕಳಿಸದಂತೆ ಸರ್ಕಾರದ ಹಣ ಪೋಲಾಗದ ರೀತಿಯಲ್ಲಿ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸೂಚಿಸಲಾಯಿತು. ಈ ಕುರಿತು ಲೀಡ್ ಬ್ಯಾಂಕ್ ಅಧಿಕಾರಿಗಳ ವಿಶೇಷ ಸಭೆ ಕರೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮುಂದಿನ ಸೋಮವಾರ ಬೆಂಗಳೂರಿನಲ್ಲಿ ಸಭೆ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಮುಂದಿನ ಸೋಮವಾರ ಬೆಂಗಳೂರಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಜಿಲ್ಲೆಯಲ್ಲಿ ಬಿತ್ತನೆ ಬೀಜ, ಮೇವು ಹಾಗೂ ರಸಗೊಬ್ಬರಗಳ ಪೂರೈಕೆ ಸಮರ್ಪಕವಾಗಿರುವಂತೆ ಅಧಿಕಾರಿಗಳು ನಿಗಾ ವಹಿಸಬೇಕು. ವಿವಿಧ ಇಲಾಖೆಗಳ ವಿಳಂಬವಾಗಿರುವ ಕಡತಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಮೆಹರುಜ್ ಖಾನ್, ಜಿಲ್ಲಾಧ್ಯಕ್ಷ ಶಿವಕುಮಾರ್, ಶಾಸಕರಾದ ಕೊತ್ತೂರು ಜಿ. ಮಂಜುನಾಥ್, ಕೆ.ವೈ. ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ಡಾ. ರೂಪಕಲಾ ಶಶಿಧರ್, ಜಿ.ಕೆ. ವೆಂಕಟಶಿವ ರೆಡ್ಡಿ , ಸಮೃದ್ಧಿ ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಹನೀಫ್, ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಕೆಜಿಎಫ್ ರಕ್ಷಣಾಧಿಕಾರಿ ಶಿವಾಂಷು ರಜಪೂತ, ಡಿಸಿಫ್ ಸರೀನಾ ಸಿಕ್ಕಲಿಗಾರ್, ಉಪಕಾರ್ಯದರ್ಶಿ ಟಿ.ಕೆ. ರಮೇಶ್, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾ ಪ್ರಸಾದ್ ದಿಲೀಪ್, ವಿವಿಧ ತಾಲೂಕುಗಳ ತಹಸೀಲ್ದಾರ್ಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.