ಉಪ್ಪಳ (www.vknews.in): ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ 13 ವರ್ಷದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಪ್ಪಳದಲ್ಲಿ ನಡೆದಿದೆ. ಮೃತರನ್ನು ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂಬಕರ್ ಅಸಾನ್ (13) ಎಂದು ಗುರುತಿಸಲಾಗಿದೆ. ಮಂಗಲ್ಪಾಡಿ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಬೂ ಬಕರ್ ಅಸಾನ್, ನಿನ್ನೆ ಸಂಜೆ ಸುಮಾರು 5 ಗಂಟೆಗೆ ಪೆರಿಂಗಡಿ ಮಸೀದಿಯ ಕೆರೆಯಲ್ಲಿ ಸ್ನೇಹಿತರೊಂದಿಗೆ ಸ್ನಾನ ಮಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಸ್ನೇಹಿತರು ಸ್ನಾನ ಮುಗಿಸಿ ಮನೆಗೆ ತೆರಳಲು ಸಿದ್ಧವಾಗುತ್ತಿದ್ದಾಗ ಅಬೂ ಬಕರ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಸ್ನೇಹಿತರು ಸುತ್ತಮುತ್ತ ಹುಡುಕಾಟ ನಡೆಸಿದರೂ ಬಾಲಕ ಪತ್ತೆಯಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ಸಮೀಪದ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದಾಗ ಬಾಲಕ ಕೆರೆಯಲ್ಲಿ ಮುಳುಗುತ್ತಿರುವ ದೃಶ್ಯ ಕಂಡುಬಂದಿದೆ. ತಕ್ಷಣ ಸ್ಥಳೀಯರು ಹಾಗೂ ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ಆರಂಭಿಸಿದರು.
ಸತತ ಶೋಧದ ಬಳಿಕ ರಾತ್ರಿ ಸುಮಾರು 10 ಗಂಟೆಗೆ ಬಾಲಕನನ್ನು ಪತ್ತೆಹಚ್ಚಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಬೂ ಬಕರ್ ಅಸಾನ್ ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ಕುರಿತು ಮಂಜೇಶ್ವರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅಬೂ ಬಕರ್ ಅಸಾನ್ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಶಾಲಾ ಬಳಗದಲ್ಲಿ ತೀವ್ರ ದುಃಖ ಆವರಿಸಿದೆ. ಮೃತರು ತಂದೆ, ತಾಯಿ, ಸಹೋದರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.