ಬೆಂಗಳೂರು (www.vknews.in): ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಸೇರಿದಂತೆ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಅಡಿಯಲ್ಲಿ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದಾದ್ಯಂತ ವಿಶೇಷ ತಪಾಸಣೆ ಹಾಗೂ ದಾಳಿ ಕಾರ್ಯಾಚರಣೆಗಳು ಆರಂಭವಾಗಿವೆ. ನಿಷೇಧಿತ ಉತ್ಪನ್ನಗಳ ತಯಾರಿಕೆ ಅಥವಾ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಆಗಸ್ಟ್ 10ರಂದು ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಒಂದು ವರ್ಷದ ಅವಧಿಗೆ ನಿಷೇಧ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ನಿಷೇಧಿತ ತಂಬಾಕು ಅಥವಾ ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ ಅಥವಾ ಮಾರಾಟ ಕಂಡುಬಂದರೆ, ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮನವಿ ಮಾಡಿದೆ. ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸರ್ಕಾರದೊಂದಿಗೆ ಸಹಕರಿಸುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಮನವಿ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.