ಬೆಂಗಳೂರು (www.vknews.in): ಸಾರ್ವಜನಿಕರು ಆಹಾರ ಸೇವಿಸುವ ಹೋಟೆಲ್, ಪಿಜಿ, ಮೆಡಿಕಲ್ ಸ್ಟೋರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಸಿ, ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರದ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಕುರಿತು ಸಾರ್ವಜನಿಕರು ನೇರವಾಗಿ ದೂರು ಸಲ್ಲಿಸಬಹುದಾಗಿದೆ. ಈ ದೂರುಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತ್ವರಿತವಾಗಿ ತಲುಪುವಂತೆ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಆಹಾರ ಇಲಾಖೆ ಕೈಗೊಂಡಿರುವ ಕಾರ್ಯಾಚರಣೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರ ದೂರುಗಳಿಗೆ ಶೀಘ್ರ ಸ್ಪಂದಿಸುವ ಉದ್ದೇಶದಿಂದ ಈ QR ಕೋಡ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಈ ರೀತಿಯ ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ಹೋಟೆಲ್ಗಳ ಮೇಲಿನ ದಾಳಿ ಮತ್ತು ತಪಾಸಣೆ ಮುಂದುವರಿಯಲಿದೆ. ಇದರ ಜೊತೆಗೆ ಖಾಸಗಿ ಹಾಸ್ಟೆಲ್ಗಳು, ಪಿಜಿಗಳು, ಬಸ್ ನಿಲ್ದಾಣಗಳು, ಮದುವೆ ಮನೆಗಳು, ರೈಲ್ವೆ ಕ್ಯಾಂಟೀನ್ಗಳು ಹಾಗೂ ವಿಮಾನಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟವನ್ನೂ ಪರಿಶೀಲಿಸಲಾಗುವುದು ಎಂದು ಖಾದರ್ ಹೇಳಿದ್ದಾರೆ.
ವಿಶೇಷವಾಗಿ ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದು ಪತ್ತೆಯಾದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.