ಬೆಂಗಳೂರು (www.vknews.in): ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ನಡೆದ ತಂದೆ-ಮಗನ ನಿಗೂಢ ಸಾವಿನ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪತಿ ಹಾಗೂ ಮಗನನ್ನು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದು, ವಿಚಾರಣೆ ವೇಳೆ ಪತ್ನಿ ಹರಿಣಿ ಅಸಲಿ ವಿಚಾರ ಬಾಯಿಬಿಟ್ಟಿದ್ದಾಳೆ ಎನ್ನಲಾಗಿದೆ.
ಚಿಕ್ಕಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಅಭಿನಂದನ್ ಹಾಗೂ ಅವರ ಪುತ್ರ ಯದುವೀರ್ ಅವರ ಮೃತದೇಹಗಳು ಪತ್ತೆಯಾಗಿದ್ದವು.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಘಟನೆ ನಡೆದ ರಾತ್ರಿ ಸುಮಾರು 11 ಗಂಟೆಗೆ ಹರಿಣಿ ತನ್ನ ಪ್ರಿಯಕರ ವಿನಯ್ನನ್ನು ಮನೆಗೆ ಕರೆಸಿಕೊಂಡಿದ್ದಾಳೆ ಎನ್ನಲಾಗಿದೆ. ಬಳಿಕ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನು ಆಫ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಈ ವೇಳೆ ಪತಿ ಅಭಿನಂದನ್ ಅವರ ತಲೆಗೆ ಸೌಟ್ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಪುತ್ರ ಯದುವೀರ್ ನೋಡಿದ್ದಾನೆ ಎನ್ನಲಾಗಿದ್ದು, ಬಳಿಕ ಮಗನನ್ನೂ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಅಭಿನಂದನ್ ಮತ್ತು ಹರಿಣಿ ಸುಮಾರು ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಹರಿಣಿಯ ವರ್ತನೆ ಕುರಿತು ಸಂಬಂಧಿಕರಿಗೆ ಅನುಮಾನವಿತ್ತು ಎಂಬ ಮಾಹಿತಿಯೂ ತನಿಖೆಯಲ್ಲಿ ಹೊರಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಣಿ ಹಾಗೂ ಆಕೆಯ ಪ್ರಿಯಕರ ವಿನಯ್ ಅವರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಹತ್ಯೆಗೆ ನಿಖರ ಕಾರಣ ಮತ್ತು ಘಟನೆಯ ಸಂಪೂರ್ಣ ಹಿನ್ನೆಲೆಯನ್ನು ತನಿಖೆ ಮೂಲಕ ಪತ್ತೆಹಚ್ಚಲಾಗುತ್ತಿದೆ. ಚಿಕ್ಕಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಡಬಲ್ ಮರ್ಡರ್ ಪ್ರಕರಣ ಇದೀಗ ಬೆಂಗಳೂರಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.