ಹುಬ್ಬಳ್ಳಿ (www.vknews.in): ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಗಣೇಶೋತ್ಸವದ ವೇಳೆ ಮಿತಿ ಮೀರಿದ ಡಿಜೆ ಸೌಂಡ್ ಸಿಸ್ಟಮ್ ಬಳಕೆ ಕಂಡುಬಂದರೆ ಜಪ್ತಿ ಮಾಡಿ ₹1 ಲಕ್ಷದವರೆಗೆ ದಂಡ ವಿಧಿಸುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಹಾಗೂ ರಾಸಾಯನಿಕ ಗುಣವುಳ್ಳ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಡಿಜೆ ಸೌಂಡ್ ಸಿಸ್ಟಮ್ ಬಳಕೆಯಿಂದ ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಾಗಿ ಡಿಜೆ ಬದಲಿಗೆ ಡೊಳ್ಳು ಕುಣಿತ, ಹೆಜ್ಜೆ ಮೇಳ, ಕರಡಿ ಮಜಲು ಸೇರಿದಂತೆ ಸಾಂಪ್ರದಾಯಿಕ ಜನಪದ ಕಲೆಗಳಿಗೆ ಪ್ರೋತ್ಸಾಹ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪಿಓಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ಅವಕಾಶವಿಲ್ಲ. ನಗರ ಹಾಗೂ ಜಿಲ್ಲೆಯಾದ್ಯಂತ ಅಧಿಕಾರಿಗಳು ದಿಢೀರ್ ತಪಾಸಣೆ ನಡೆಸಿ ಪಿಓಪಿ ಮೂರ್ತಿಗಳು ಪತ್ತೆಯಾದರೆ ತಕ್ಷಣ ವಶಪಡಿಸಿಕೊಂಡು, ಮಾರಾಟಗಾರರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಗಣೇಶ ಮೂರ್ತಿ ಮಾರಾಟಗಾರರು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುವಂತೆ ಜಿಲ್ಲಾಡಳಿತ ತಿಳಿಸಿದೆ.
ಹೊರ ಜಿಲ್ಲೆಗಳಿಂದ ಪಿಓಪಿ ಗಣೇಶ ಮೂರ್ತಿಗಳು ನಗರ ಹಾಗೂ ಪಟ್ಟಣಗಳಿಗೆ ಪ್ರವೇಶಿಸದಂತೆ ಜಿಲ್ಲೆಯ ಗಡಿ ಭಾಗಗಳು ಮತ್ತು ಮಹಾನಗರದ ಗಡಿಯಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ಕಟ್ಟುನಿಟ್ಟಿನ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ. ನಿಯಮ ಉಲ್ಲಂಘಿಸಿ ಪಿಓಪಿ ಮೂರ್ತಿಗಳನ್ನು ಸಾಗಿಸುವ ವಾಹನಗಳು ಹಾಗೂ ಮೂರ್ತಿಗಳನ್ನು ವಶಪಡಿಸಿಕೊಳ್ಳುವಂತೆ ಪೊಲೀಸ್, ಪರಿಸರ, ಕಂದಾಯ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ, ನೀರಿನಲ್ಲಿ ಸುಲಭವಾಗಿ ಕರಗುವ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವಂತೆ ಜಿಲ್ಲಾಧಿಕಾರಿ ಕರೆ ನೀಡಿದ್ದಾರೆ. ಮನೆಯಲ್ಲಿಯೇ ಬಕೆಟ್ ನೀರಿನಲ್ಲಿ ಮಣ್ಣಿನ ಗಣೇಶ ಮೂರ್ತಿಯನ್ನು ವಿಸರ್ಜಿಸಿ, ನಂತರ ಅದೇ ಮಣ್ಣಿನಲ್ಲಿ ಗಿಡ-ಸಸಿಗಳನ್ನು ಬೆಳೆಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಯ ಸಂದರ್ಭದಲ್ಲಿ ಮೆರವಣಿಗೆ ನಡೆಸುವ ಮಾರ್ಗವನ್ನು ಮುಂಚಿತವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಿಳಿಸಬೇಕು. ಮಾರ್ಗ ಬದಲಾವಣೆ ಇದ್ದರೂ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ಮೆರವಣಿಗೆ ನಡೆಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.
ಗಣೇಶೋತ್ಸವದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಬಳಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. “ನಮ್ಮ ಶ್ರದ್ಧೆ ಪರಿಸರಕ್ಕೆ ಮಾರಕವಾಗಬಾರದು, ನಮ್ಮ ಪೂಜೆ ಮುಂದಿನ ಪೀಳಿಗೆಗೆ ಶಾಪವಾಗಬಾರದು” ಎಂಬ ಸಂದೇಶದೊಂದಿಗೆ ಎಲ್ಲರೂ ಜವಾಬ್ದಾರಿಯುತವಾಗಿ ಹಬ್ಬ ಆಚರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಮಾತನಾಡಿ, ಪಾಲಿಕೆಯ ವತಿಯಿಂದ ಮಣ್ಣಿನ ಗಣಪತಿ ಮೂರ್ತಿ ತಯಾರಕರಿಗೆ ₹25,000 ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮನೆಗಳಲ್ಲಿ ಮಣ್ಣಿನ ಗಣಪತಿ ಪ್ರತಿಷ್ಠಾಪಿಸಿದ ಸಾರ್ವಜನಿಕರು ಗಣಪತಿಯ ಫೋಟೋಗಳನ್ನು ಮಹಾನಗರ ಪಾಲಿಕೆಗೆ ಸಲ್ಲಿಸಿದರೆ ಪ್ರಮಾಣಪತ್ರ ನೀಡಲಾಗುವುದು ಎಂದರು.
ಗಣಪತಿ ಮೂರ್ತಿಗಳನ್ನು ಪಾಲಿಕೆ ನಿಯೋಜಿಸಿರುವ ಸಾರ್ವಜನಿಕ ನೀರಿನ ತೊಟ್ಟಿಗಳಲ್ಲೇ ಕಡ್ಡಾಯವಾಗಿ ವಿಸರ್ಜಿಸಬೇಕು. ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಚಲನಚಿತ್ರ ಹಾಡುಗಳನ್ನು ಹಾಕದೆ ದೇವರ ನಾಮಾವಳಿಗಳನ್ನು ಹಾಕುವಂತೆ ಸೂಚಿಸಲಾಗಿದೆ. ಅಲ್ಲದೆ, ಕಾರ್ಯಕ್ರಮಗಳಲ್ಲಿ ಲೇಸರ್ ಲೈಟ್ ಬಳಕೆ ಮಾಡಬಾರದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅನುಪ್ರಿಯಾ ಸಾಕ್ಯಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶೋಭಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಸೇರಿದಂತೆ ಗಣೇಶ ಮೂರ್ತಿ ತಯಾರಕರು, ಮಾರಾಟಗಾರರು, ಪಟಾಕಿ ವ್ಯಾಪಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.