ಬೆಂಗಳೂರು: (www.vknews.in) ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿನ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸುವ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಅರ್ಜಿ ಮರುಪರಿಶೀಲನೆಗಾಗಿ ಸೇವಾ ಸಿಂಧು ಕೇಂದ್ರಗಳ ಜತೆಗೆ ಮನೆಮನೆಗೆ ತೆರಳಿ ಫಲಾನುಭವಿಗಳ ಮಾಹಿತಿ ಪರಿಶೀಲಿಸುವ ವ್ಯವಸ್ಥೆಯನ್ನೂ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿರುವವರಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಹಣ ಸಮರ್ಪಕವಾಗಿ ತಲುಪುವಂತೆ ಪರಿಶೀಲನಾ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.
ಅರ್ಜಿ ಮರುಪರಿಶೀಲನೆಯ ವೇಳೆ ಫಲಾನುಭವಿಗಳ ಬಯೋಮೆಟ್ರಿಕ್ ಹಾಗೂ ಫೇಸ್ ಅಥೆಂಟಿಕೇಶನ್ ಮೂಲಕವೂ ಪರಿಶೀಲನೆ ನಡೆಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಪ್ರಕ್ರಿಯೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಇ-ಆಡಳಿತ ಇಲಾಖೆ ವತಿಯಿಂದ ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಶನ್ಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಅಂತಿಮ ಪರಿಶೀಲನೆಯ ಬಳಿಕ ಅವುಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ ₹76,951 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳಿಗೆ ಪಾವತಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ. ಒಟ್ಟು 1,24,48,938 ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಇದುವರೆಗೆ 32 ಕಂತುಗಳ ಮೂಲಕ ಪ್ರತಿ ಕಂತಿಗೆ ₹2,000ರಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅರ್ಹತೆ ಹಾಗೂ ದಾಖಲೆಗಳ ಪರಿಶೀಲನೆ ಮತ್ತಷ್ಟು ಕಟ್ಟುನಿಟ್ಟಾಗುವ ಸಾಧ್ಯತೆ ಇದ್ದು, ಗೃಹಲಕ್ಷ್ಮಿ ಫಲಾನುಭವಿಗಳು ತಮ್ಮ ಅರ್ಜಿ ಹಾಗೂ ವೈಯಕ್ತಿಕ ವಿವರಗಳನ್ನು ಸರಿಯಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.