ಲಕ್ನೋ (www.vknews.in) : ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭೀಕರ ಘಟನೆ ನಡೆದಿದೆ. ಬ್ಯಾಂಕ್ ಉದ್ಯೋಗಿಯೊಬ್ಬರು ತಮ್ಮ ಪತ್ನಿಯನ್ನು ಕಚೇರಿ ಬಳಿ ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಮನೆಗೆ ತೆರಳಿ ತಂಗಿಯನ್ನೂ ಗುಂಡಿಕ್ಕಿ ಕೊಂದು, ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಮತಿನಗರದಲ್ಲಿ ನಡೆದಿದೆ. ಮೃತರನ್ನು ಎಸ್ಬಿಐ ಉದ್ಯೋಗಿ ಮಾನಸ್ ವಾಜಪೇಯಿ (38), ಅವರ ಪತ್ನಿ ಹಾಗೂ ಐಸಿಐಸಿಐ ಬ್ಯಾಂಕ್ ಉದ್ಯೋಗಿ ದಿವ್ಯಾ ಮಿಶ್ರಾ ಮತ್ತು ಮಾನಸ್ ಅವರ ತಂಗಿ ಎಂದು ಗುರುತಿಸಲಾಗಿದೆ.
ಗುರುವಾರ ಮಧ್ಯಾಹ್ನ ಮಾನಸ್, ಪತ್ನಿ ದಿವ್ಯಾ ಕೆಲಸ ಮಾಡುತ್ತಿದ್ದ ಬ್ಯಾಂಕ್ ಬಳಿ ತೆರಳಿ ಅವರನ್ನು ಹೊರಗೆ ಕರೆಸಿಕೊಂಡಿದ್ದಾರೆ. ಇಬ್ಬರ ನಡುವೆ ಕೆಲಕಾಲ ಮಾತುಕತೆ ನಡೆದ ಬಳಿಕ ವಾಗ್ವಾದ ಉಂಟಾಗಿದೆ ಎನ್ನಲಾಗಿದೆ. ಈ ವೇಳೆ ಮಾನಸ್ ಪತ್ನಿ ದಿವ್ಯಾ ಮೇಲೆ ಗುಂಡು ಹಾರಿಸಿ ಅಲ್ಲಿಂದ ತೆರಳಿದ್ದಾರೆ. ಗಂಭೀರವಾಗಿ ಗಾಯಗೊಂಡ ದಿವ್ಯಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆಯ ಬಳಿಕ ಮಾನಸ್ ತಮ್ಮ ವಾಟ್ಸಾಪ್ ಸ್ಟೇಟಸ್ನಲ್ಲಿ ಪತ್ನಿಯ ವಿರುದ್ಧ ಆರೋಪಗಳನ್ನು ಮಾಡಿರುವ ಸಂದೇಶ ಪ್ರಕಟಿಸಿದ್ದಾನೆ ಎನ್ನಲಾಗಿದೆ. ಬಳಿಕ ತಂಗಿಯನ್ನೂ ಕೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶದಲ್ಲಿ ತಿಳಿಸಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ನೆರೆಹೊರೆಯವರು ಆತಂಕಗೊಂಡು ಮಾನಸ್ ಮನೆಗೆ ಧಾವಿಸಿದ್ದಾರೆ. ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಮಾನಸ್ ಹಾಗೂ ಅವರ ತಂಗಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದಾರೆ. ಮಾನಸ್ ಬಳಿಯಲ್ಲಿ ಪಿಸ್ತೂಲ್ ಕೂಡ ಪತ್ತೆಯಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಾನಸ್ ಮತ್ತು ದಿವ್ಯಾ ಸುಮಾರು 12 ವರ್ಷಗಳ ಹಿಂದೆ ವಿವಾಹವಾಗಿದ್ದರು. ಕಳೆದ ಒಂದೂವರೆ ವರ್ಷದಿಂದ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ದಿವ್ಯಾ ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
ಕೌಟುಂಬಿಕ ವೈಮನಸ್ಯವೇ ಘಟನೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳು ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.