ಗುಣಾ (www.vknews.in): ಮಧ್ಯಪ್ರದೇಶದ ಗುಣಾ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ 5ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರಿಗೆ ಸಹಪಾಠಿ ಬಾಲಕನೊಬ್ಬ ನೀರಿನ ಬಾಟಲಿಯಲ್ಲಿದ್ದ ಮೂತ್ರವನ್ನು ಕುಡಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಾಲಕಿಯರು ಮುಖ್ಯೋಪಾಧ್ಯಾಯರಿಗೆ ದೂರು ನೀಡಿದಾಗ, “ಬಾಯಿಯಲ್ಲಿ ಕೆಟ್ಟ ವಾಸನೆ ಬಂದರೆ 10 ರೂಪಾಯಿಯ ಚಾಕೊಲೇಟ್ ತಿನ್ನಿ” ಎಂದು ನಿರ್ಲಕ್ಷ್ಯದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಅರಾನ್ ತಾಲೂಕಿನ ಶಾಲೆಯಲ್ಲಿ ಸೋಮವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯರ ದೂರಿನ ಬಳಿಕ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ವಿಷಯ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಆಡಳಿತಾಧಿಕಾರಿಗಳು ಹಾಗೂ ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯರು, ಅವರ ಪೋಷಕರು ಹಾಗೂ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಯಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.
ಘಟನೆ ಕುರಿತು ಗುಣಾ ಜಿಲ್ಲಾಧಿಕಾರಿ ಕಿಶೋರ್ ಕುಮಾರ್ ಕನ್ಯಾಲ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯೋಪಾಧ್ಯಾಯರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಹಸೀಲ್ದಾರ್ ಹಾಗೂ ಬ್ಲಾಕ್ ಶಿಕ್ಷಣಾಧಿಕಾರಿಗಳು (BEO) ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಆರೋಪ ಎದುರಿಸುತ್ತಿರುವ ಬಾಲಕ ಅದೇ ತರಗತಿಯ ವಿದ್ಯಾರ್ಥಿಯಾಗಿದ್ದು, ಆತನನ್ನೂ ಆತನ ಪೋಷಕರನ್ನೂ ವಿಚಾರಣೆಗೆ ಕರೆಸಲಾಗಿದೆ.
ಘಟನೆಯಲ್ಲಿ ಇನ್ನೂ ಕೆಲವು ವಿದ್ಯಾರ್ಥಿಗಳು ಭಾಗಿಯಾಗಿರುವ ಸಾಧ್ಯತೆಯ ಬಗ್ಗೆಯೂ ತನಿಖೆ ನಡೆಯುತ್ತಿದೆ. ಸಂಪೂರ್ಣ ತನಿಖೆ ನಡೆಸಿ ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾಡಳಿತ ಸೂಚಿಸಿದೆ. ತನಿಖಾ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.