ಮಂಗಳೂರು (www.vknews.in): ರಾಜ್ಯದಲ್ಲಿ ನಕಲಿ ಔಷಧಗಳ ಜಾಲ ಹಾಗೂ ಹೋಟೆಲ್, ಬೇಕರಿ ಮತ್ತು ರಸ್ತೆಬದಿ ತಿನಿಸು ಕೇಂದ್ರಗಳಲ್ಲಿ ಕಳಪೆ ಹಾಗೂ ಅಸ್ವಚ್ಛ ಆಹಾರ ಮಾರಾಟಕ್ಕೆ ಕಡಿವಾಣ ಹಾಕಲು ತಾಲೂಕು ಮಟ್ಟದಲ್ಲಿ ವಿಶೇಷ ‘ವಾಚ್ ಟೀಮ್’ ರಚಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಮಾಹಿತಿ ನೀಡಿದರು.
60 ವರ್ಷ ಮೇಲ್ಪಟ್ಟ ನಿವೃತ್ತ ವೈದ್ಯರು, ಆಹಾರ ಮತ್ತು ಪೌಷ್ಟಿಕಾಂಶ ತಜ್ಞರು, ಪ್ರಾಧ್ಯಾಪಕರು ಹಾಗೂ ಸಾಮಾಜಿಕ ಕಾಳಜಿಯುಳ್ಳ ಹಿರಿಯ ನಾಗರಿಕರನ್ನು ಗುರುತಿಸಿ ತಾಲೂಕುವಾರು ವಾಚ್ ಟೀಮ್ಗಳನ್ನು ರಚಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ಹೇಳಿದರು.
ಈ ಸಮಿತಿಯ ಸದಸ್ಯರಿಗೆ ಸ್ಥಳೀಯ ಹೋಟೆಲ್, ಬೇಕರಿ ಹಾಗೂ ಔಷಧ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಅವಕಾಶ ನೀಡಲಾಗುತ್ತದೆ. ಅಲ್ಲದೆ, ಆಹಾರದ ಸ್ವಚ್ಛತೆ, ಗುಣಮಟ್ಟ ಹಾಗೂ ಔಷಧಗಳ ಕುರಿತು ಕಂಡುಬರುವ ಲೋಪದೋಷಗಳನ್ನು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗೆ ನೇರವಾಗಿ ವರದಿ ಮಾಡುವ ವ್ಯವಸ್ಥೆ ಕಲ್ಪಿಸಲು ಕಾನೂನು ಚೌಕಟ್ಟಿನಲ್ಲಿ ನಿಯಮ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಕೋಟ್ಯಂತರ ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಕೆಲವೇ ನೂರು ಮಂದಿ ಅಧಿಕಾರಿಗಳಿಂದ ಪ್ರತಿಯೊಂದು ಹೋಟೆಲ್, ಆಹಾರ ಕೇಂದ್ರ ಹಾಗೂ ಔಷಧ ಅಂಗಡಿಯನ್ನು ನಿರಂತರವಾಗಿ ಪರಿಶೀಲಿಸುವುದು ಸಾಧ್ಯವಿಲ್ಲ ಎಂದು ಯು.ಟಿ. ಖಾದರ್ ಹೇಳಿದರು.
ಆಹಾರ ಹಾಗೂ ಔಷಧಗಳಲ್ಲಿನ ಕಲಬೆರಕೆ ಮತ್ತು ಗುಣಮಟ್ಟದ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ನಾಗರಿಕ ಸಮಾಜವೂ ಸರ್ಕಾರದೊಂದಿಗೆ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ವಾಚ್ ಟೀಮ್ಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ಅವರು ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.