ಬೆಂಗಳೂರು (www.vknews.in): ಕೇವಲ ₹200 ಹಣಕ್ಕಾಗಿ ಮಂಗಳಮುಖಿಯೊಬ್ಬರನ್ನು ಡ್ರ್ಯಾಗರ್ನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಆಗಸ್ಟ್ 21ರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತರನ್ನು ದೇವಿ ಎಂದು ಗುರುತಿಸಲಾಗಿದೆ. ರಾಮಮೂರ್ತಿ ನಗರದ ನಿವಾಸಿ ಗೌತಮ್ (29) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ತಡರಾತ್ರಿ ಸುಮಾರು 2.30ರಿಂದ 3 ಗಂಟೆಯ ನಡುವೆ ದೇವಿ ಅವರು ಮೆಜೆಸ್ಟಿಕ್ ಬಸ್ ನಿಲ್ದಾಣದ ಹೊರಭಾಗದಲ್ಲಿ ನಿಂತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಡಿಯೋ ಸ್ಕೂಟರ್ನಲ್ಲಿ ಮೆಜೆಸ್ಟಿಕ್ಗೆ ಬಂದಿದ್ದ ಗೌತಮ್ ಮದ್ಯಪಾನ ಮಾಡಿದ್ದ ಎನ್ನಲಾಗಿದ್ದು, ದರೋಡೆ ಮಾಡುವ ಉದ್ದೇಶದಿಂದ ಅಲ್ಲಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ವೇಳೆ ದೇವಿ ಅವರ ಬಳಿ ತೆರಳಿದ ಗೌತಮ್ ₹200 ನೀಡುವಂತೆ ಒತ್ತಾಯಿಸಿದ್ದಾನೆ. ಆದರೆ ದೇವಿ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಆಕ್ರೋಶಗೊಂಡ ಆರೋಪಿ ತನ್ನ ಬಳಿಯಿದ್ದ ಡ್ರ್ಯಾಗರ್ನಿಂದ ದೇವಿಯ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ.
ಬಳಿಕ ದೇವಿಯ ಬ್ಯಾಗ್ ಹಾಗೂ ಮೊಬೈಲ್ ಫೋನ್ ಕಸಿದುಕೊಂಡಿದ್ದಾನೆ. ದೇವಿ ಪ್ರತಿರೋಧಿಸಲು ಮುಂದಾದಾಗ ಆರೋಪಿ ಮತ್ತೆ ಡ್ರ್ಯಾಗರ್ನಿಂದ ಮೂರು ಬಾರಿ ಇರಿದು ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿ ದೇವಿಯ ಬ್ಯಾಗ್ನಲ್ಲಿದ್ದ ನಗದು ಹಾಗೂ ಮೊಬೈಲ್ ಫೋನ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದ ಎನ್ನಲಾಗಿದೆ.
ಘಟನೆ ಕುರಿತು ಮಾಹಿತಿ ದೊರೆತ ಕೂಡಲೇ ಉಪ್ಪಾರಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳವು ಮಾಡಿದ್ದ ಮೊಬೈಲ್ ಹಾಗೂ ಹಣವನ್ನು ಜಪ್ತಿ ಮಾಡಲಾಗಿದೆ.
ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಅವರ ಪ್ರಕಾರ, ಆರೋಪಿ ಮದ್ಯಪಾನ ಮಾಡಿ ದರೋಡೆ ಉದ್ದೇಶದಿಂದ ಸ್ಥಳಕ್ಕೆ ಬಂದಿದ್ದ. ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ದೇವಿ ಮೇಲೆ ಡ್ರ್ಯಾಗರ್ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.