ಹಾಸನ (www.vknews.in): ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ 19 ವರ್ಷದ ಯುವತಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯುವತಿಯ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಪ್ರಿಯಕರನಿಂದ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ.
ಮೃತ ಯುವತಿಯನ್ನು ರಚಿತಾ (19) ಎಂದು ಗುರುತಿಸಲಾಗಿದೆ. ಸಾಕಮ್ಮ-ಮಂಜಶೆಟ್ಟಿ ದಂಪತಿಯ ಪುತ್ರಿಯಾಗಿರುವ ರಚಿತಾ ಬಿಎ ವ್ಯಾಸಂಗ ಮಾಡುತ್ತಿದ್ದರು. ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ರಚಿತಾ ಸುಮಾರು ಒಂದೂವರೆ ವರ್ಷದಿಂದ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನವೀನ್ ಚನ್ನರಾಯಪಟ್ಟಣದ ರೇಣುಕಾಂಬ ರಸ್ತೆಯಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಬೇಕರಿಯಲ್ಲಿ ರಚಿತಾ ಅವರ ತಾಯಿ ಸಾಕಮ್ಮ ಕೂಡ ಕೆಲಸ ಮಾಡುತ್ತಿದ್ದರು.
ರಚಿತಾ ಹಾಗೂ ನವೀನ್ ತಮ್ಮ ಪ್ರೀತಿಯ ವಿಚಾರವನ್ನು ಸಾಕಮ್ಮ ಅವರ ಬಳಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಮದುವೆ ಮಾಡಿಸುವುದಾಗಿ ಸಾಕಮ್ಮ ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನವೀನ್ ರಚಿತಾಗೆ ಕಿರುಕುಳ ನೀಡುತ್ತಿದ್ದ ಎಂದು ತಾಯಿ ಸಾಕಮ್ಮ ಆರೋಪಿಸಿದ್ದಾರೆ.
ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಯುವತಿಯ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.