ತುಮಕೂರು | www.vknews.in: “ನನಗೆ ಈಗ 80 ವರ್ಷ. ಆರೋಗ್ಯವಾಗಿದ್ದೇನೆ. ಎಷ್ಟು ವರ್ಷ ಬದುಕುತ್ತೇನೆ ಎಂಬುದು ಗೊತ್ತಿಲ್ಲ. ಆದರೆ ಮುಂದಿನ ಚುನಾವಣೆಗೆ ಸ್ಪರ್ಧಿಸಬಾರದು ಎಂದು ಅಂದುಕೊಂಡಿದ್ದೇನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತುಮಕೂರಿನಲ್ಲಿ ಭಾನುವಾರ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾನ ಮನಸ್ಕರ ವೇದಿಕೆ ಆಯೋಜಿಸಿದ್ದ ವೀರಣ್ಣ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದ ಚುನಾವಣೆಯಿಂದ ದೂರ ಉಳಿಯುತ್ತಿಲ್ಲ; ಇಂದಿನ ಚುನಾವಣಾ ವ್ಯವಸ್ಥೆ ಹದಗೆಟ್ಟಿದ್ದು, ಚುನಾವಣೆಗಳು ಬಹಳ ದುಬಾರಿಯಾಗಿವೆ ಎಂಬ ಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ತಿಳಿಸಿದರು. “ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದು ಹೇಳಿಕೊಂಡರೆ ಅದು ಆತ್ಮವಂಚನೆಯಾಗುತ್ತದೆ. ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಹೋರಾಡಬೇಕು” ಎಂದರು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಆಫರ್ ಬಂದಿದ್ದರೂ ಅದನ್ನು ತಿರಸ್ಕರಿಸಿದ್ದಾಗಿ ಸಿದ್ದರಾಮಯ್ಯ ಹೇಳಿದರು. 1991ರಲ್ಲಿ ಕೊಪ್ಪಳದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ 10 ಸಾವಿರ ಮತಗಳ ಅಂತರದಿಂದ ಸೋತಿದ್ದನ್ನು ಅವರು ನೆನಪಿಸಿಕೊಂಡರು. “ಆ ಬಳಿಕ ಲೋಕಸಭೆಗೆ ಮತ್ತೆ ಸ್ಪರ್ಧಿಸಬಾರದು ಎಂದು ತೀರ್ಮಾನಿಸಿದ್ದೆ. ಇನ್ನು ಮುಂದೆ ಲೋಕಸಭೆಗೂ ನಿಲ್ಲುವುದಿಲ್ಲ, ವಿಧಾನಸಭೆಗೂ ನಿಲ್ಲುವುದಿಲ್ಲ” ಎಂದು ಹೇಳಿದರು.
ಚುನಾವಣಾ ಆಯೋಗ ನಿಗದಿಪಡಿಸಿದ ಮಿತಿಯೊಳಗೆ ಮಾತ್ರ ಅಭ್ಯರ್ಥಿಗಳು ಹಣ ಖರ್ಚು ಮಾಡಬೇಕು. ಆದರೆ ವಾಸ್ತವದಲ್ಲಿ ಅದು ನಡೆಯುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. 1983ರ ಚುನಾವಣೆಗೂ 2023ರ ಚುನಾವಣೆಗೂ ಬಹಳಷ್ಟು ವ್ಯತ್ಯಾಸವಿದೆ. ಚುನಾವಣೆಯಲ್ಲಿ ಅಕ್ರಮವಾಗಿ ಹಣ ಖರ್ಚು ಮಾಡುವುದನ್ನು ತಡೆಯಲು ಹೋರಾಟ ಅಗತ್ಯ. ಇದಕ್ಕೆ ಜನರೂ ಸಹಕಾರ ನೀಡಬೇಕು ಎಂದು ಅವರು ಹೇಳಿದರು. ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು ವೀರಣ್ಣ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.